ಮಂಗಳೂರು ಲೋಕಾಯುಕ್ತ ಪೊಲೀಸರಿಂದ ದಾಳಿ: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಸಹಾಯಕ ಅಭಿಯಂತರೆ

ಮಂಗಳೂರು, ಫೆ.20: ಕಾಮಗಾರಿಯೊಂದರ ಬಿಲ್ ಮಂಜೂರಾತಿಗಾಗಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯದ ಹಾಲ್ ರಚನೆಯ ಕಾಮಗಾರಿಯ ಬಿಲ್ ಮಂಜೂರಾತಿಗೆ ಪಂಚಾಯತ್‌ರಾಜ್ ಇಂಜಿನಿಯರಿಂಗ್‌ನ ತಾಂತ್ರಿಕ ವಿಭಾಗದ ಸಹಾಯಕ ಅಭಿಯಂತರೆ ರೂಪಾ 10 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಬಗ್ಗೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಸೋಮವಾರ 8 ಸಾವಿರ ರೂ. ಲಂಚ ಸ್ವೀಕರಿಸುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಸಹಾಯಕ ಅಭಿಯಂತರೆ ರೂಪಾ ಅವರನ್ನು ಲಂಚದ ಹಣ ಸಮೇತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿ.ಎ. ಸೈಮನ್‌ರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪಾಧೀಕ್ಷಕರಾದ ಕಲಾವತಿ, ಚೆಲುವರಾಜ್, ಇನ್‌ಸ್ಪೆಕ್ಟರ್ ಅಮಾನುಲ್ಲಾ ಪಾಲ್ಗೊಂಡಿದ್ದರು.
Next Story





