ಕರ್ನಾಟಕ ತಿದ್ದುಪಡಿ ವಿಧೇಯಕ ಕಾರ್ಮಿಕ ವಿರೋಧಿ: ಸಿಐಟಿಯು

ಉಡುಪಿ, ಫೆ.25: ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಟ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ - 1948ಕ್ಕೆ ತಿದ್ದುಪಡಿ ಮಾಡಿ ಕಾರ್ಖಾನೆಗಳ(ಕರ್ನಾಟಕ ತಿದ್ದುಪಡಿ) ವಿಧೇಯಕ 2023ನ್ನು ರಾಜ್ಯ ಬಿಜೆಪಿ ಸರಕಾರ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಮಾಡಿರುವುದು ಕಾರ್ಮಿಕ ವಿರೋಧಿಯಾಗಿದೆ ಎಂದು ಸಿಐಟಿಯು ಉಡುಪಿ ಜಿಲ್ಲೆ ಟೀಕಿಸಿದೆ.
ಇದು ಚುನಾವಣೆ ಹೊಸ್ತಿಲಲ್ಲಿ ಬಂಡವಾಳಗಾರರನ್ನು ಓಲೈಸುವ ಕ್ರಮ ವಾಗಿದೆ. ಈ ತಿದ್ದುಪಡಿ ವಿದೇಯಕವನ್ನು ತೀವ್ರವಾಗಿ ವಿರೋಧಿಸುತ್ತೇವೆ. ಕೂಡಲೇ ಈ ವಿಧೇಯಕವನ್ನು ವಾಪಸ್ಸು ಪಡೆಯಬೇಕೆಂದು ಎಂದು ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಕೆ.ಶಂಕರ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ರಾಜ್ಯ ಸರಕಾರವನ್ನು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿ ಫೆ.28ರಂದು ಎಲ್ಲಾ ಕಾರ್ಖಾನೆ ಗೇಟ್ ಬಳಿ ಕಾರ್ಮಿಕರಿಂದ ವಿಧೇಯಕ ಪತ್ರಿ ದಹನ ಮತ್ತು ಮಾ.1ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.