ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಮಲೆನಾಡಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ: ಕುಮಾರಸ್ವಾಮಿ

ಚಿಕ್ಕಮಗಳೂರು, ಫೆ.25: ಮಲೆನಾಡು ಭಾಗದ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಜೆಡಿಎಸ್ ಪರಿಹಾರ ನೀಡಲಿದೆ. ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ ಸೇರಿದಂತೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಪಂಚರತ್ನ ರಥಯಾತ್ರೆ ಅಂಗವಾಗಿ ಶನಿವಾರ ಶೃಂಗೇರಿ ಪಟ್ಟಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಮಲೆನಾಡು ಭಾಗದ ಅಡಿಕೆ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳಿಗೂ ಪರಿಹಾರ ಒದಗಿಸಲಾಗುವುದು. ವಿಶೇಷವಾಗಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಅಡಿಕೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದರು.
ಹಾಸನ ವಿಧಾನಸಭೆ ಕ್ಷೇತ್ರದ ಟಿಕೆಟ್ ಗೊಂದಲದ ವಿಚಾರವಾಗಿ ಶನಿವಾರ ಶೃಂಗೇರಿ ಪಟ್ಟಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಸನ ವಿಧಾನಸಭೆ ಕ್ಷೇತ್ರವನ್ನು ಹೈವೋಲ್ಟೇಜ್ ಕ್ಷೇತ್ರವನ್ನಾಗಿ ಮಾಡಿದ್ದು ಮಾಧ್ಯಮದವರು. ಹಾಸನ ಕ್ಷೇತ್ರದ ಮತದಾರರು ಯೋಚನೆ ಬೇರೆಯೇ ಇರುತ್ತದೆ. ಹಾಸನ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮುಖಂಡರು, ಕಾರ್ಯಕರ್ತರೊಂದಿಗೆ ಮುಕ್ತವಾಗಿ ಚರ್ಚಿಸುವ ನಿಟ್ಟಿನಲ್ಲಿ ಫೆ.26ರಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಭೆ ಕರೆದಿದ್ದೇನೆ. ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಹೇಳಿದರು.







