ಫೆ.28ರಂದು ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮಂಗಳೂರು, ಫೆ.26: ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಮತ್ತು ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಶಿಕ್ಷಣ ಸುಧಾರಣಾ ಕಾರ್ಯಕ್ರಮದಡಿ ʼರಾಷ್ಟ್ರೀಯ ವಿಜ್ಞಾನ ದಿನಾಚರಣೆ 2023- ಜಾಗತಿಕ ಯೋಗಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನʼ ಎಂಬ ಎಂಬ ಹೆಸರಿನಡಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆ. 28ರಂದು ಬೆಳಗ್ಗೆ 10.30 ಕ್ಕೆ ಆಯೋಜಿಸಲಾಗಿದೆ.
ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ, ಸುರತ್ಕಲ್ (NITK) ಇಲ್ಲಿನ ರಸಾಯನಶಾಸ್ತ್ರ ಪ್ರಾಧ್ಯಾಪಕ ಡಾ. ಅರುಣ್ ಎಂ. ಇಸ್ಲೂರ್ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ದತ್ತು ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿಗಳ ಪ್ರದರ್ಶನ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ನಗದು ಪುರಸ್ಕಾರ ನೀಡಲಾಗುವುದು.
ಕಾರ್ಯಕ್ರಮದ ಭಾಗವಾಗಿ ಪ್ರಕೃತಿ, ವನ್ಯಜೀವಿಗಳ ಛಾಯಾಚಿತ್ರಗಳು, ಅಪರೂಪದ ಸಮುದ್ರ ಚಿಪ್ಪುಗಳ ಪ್ರದರ್ಶನ ಆಯೋಜಿಸಲಾಗಿದೆ, ಎಂದು ಸಂಯೋಜಕ ಡಾ. ನರಸಿಂಹಯ್ಯ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.