ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್‌ನಿಂದ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರ

ಮಂಗಳೂರು : ಅಖಿಲ ಭಾರತ ಬ್ಯಾರಿ ಪರಿಷತ್ (ರಿ) ವತಿಯಿಂದ ಬದ್ರಿಯಾ ಶಿಕ್ಷಣ ಸಂಸ್ಥೆ ಹಾಗೂ ನ್ಯಾಷನಲ್ ಟ್ಯುಟೋರಿಯಲ್ ಸಂಸ್ಥೆಗಳ ಆಡಳಿತ ಮಂಡಳಿಯ ಸಹಕಾರದಿಂದ ನಗರದ ಬದ್ರಿಯಾ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತಾ ಶಿಬಿರ ನಡೆಯಿತು.
ಶಿಬಿರವನ್ನು ಉದ್ಘಾಟಿಸಿದ ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ (ಮೀಫ್)ದ ಅಧ್ಯಕ್ಷ ಮೂಸಬ್ಬ ಬ್ಯಾರಿ ಸಮಾಜಕ್ಕೆ ಶೈಕ್ಷಣಿಕ ಕೊಡುಗೆ ನೀಡುವುದು ಜೀವನದ ಧ್ಯೇಯವಾಗಬೇಕು ಎಂದರು.
ಅತಿಥಿಯಾಗಿ ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶಪಾಲ ಡಾ. ಇಸ್ಮಾಯಿಲ್, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು. ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ಸಮಾರೋಪ ಭಾಷಣ ಮಾಡಿದರು. ಬಲ್ಮಠ ಸರಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಅಬ್ದುಲ್ ಖಾದರ್ ಪರೀಕ್ಷಾ ಪೂರ್ವ ತರಬೇತಿ ನೀಡಿದರು.
ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಯು.ಎಚ್. ಖಾಲಿದ್ ಉಜಿರೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿವಿಧ ಸಂಸ್ಥೆಗಳ ಮುಖ್ಯ ಶಿಕ್ಷಕಿಯರಾದ ಶಾಲಿನಿ, ಲಿನೆಟ್ ವರ್ಗಿಸ್, ವಿದ್ಯಾ ಭಟ್ ಉಪಸ್ಥಿತರಿದ್ದರು.
ಕೋಶಾಧಿಕಾರಿ ನಿಸಾರ್ ಮುಹಮ್ಮದ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು ವಂದಿಸಿದರು. ಅನಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.