ಸಿ.ಟಿ.ರವಿಗೆ ದೇವಾಲಯಗಳಿಗೆ ಪ್ರವೇಶ ನಿರ್ಬಂಧಿಸುವಂತೆ ಕಾಂಗ್ರೆಸ್ ಮನವಿ

ಬೆಂಗಳೂರು, ಫೆ.27: ಮಾಂಸಹಾರ ಸೇವಿಸಿ ದೇವಾಲಯ ಪ್ರವೇಶಿಸಿದ ಹಿನ್ನೆಲೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ರಾಜ್ಯದ ಯಾವುದೇ ದೇವಾಲಯಗಳಿಗೆ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಮನವಿ ಮಾಡಿದ್ದಾರೆ.
ಸೋಮವಾರ ಮುಜರಾಯಿ ಇಲಾಖೆಯ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಳೆದ ವಾರ ಮಾಂಸಹಾರ ಸೇವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹನುಮನ ದೇವಾಲಯಕ್ಕೆ ಪ್ರವೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪ್ರಕರಣದ ದಾಖಲಿಸಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಸಿ.ಟಿ.ರವಿ ಅವರು ಯಾವುದೇ ದೇವಸ್ಥಾನ ಪ್ರವೇಶಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಯ ಸುತ್ತೋಲೆಯನ್ನು ಹೊರಡಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಆನಂದ್, ಪ್ರಕಾಶ್, ಮಂಜುನಾಥ್ ಸೇರಿದಂತೆ ಹಲವರು ಇದ್ದರು.