ಮಕ್ಕಳಲ್ಲಿ ಅಪೌಷ್ಠಿಕತೆ ದೂರ ಮಾಡಲು ಪ್ರಯತ್ನ: ಡಾ.ನಾಗಭೂಷಣ ಉಡುಪ

ಉಡುಪಿ: ಜಿಲ್ಲೆಯಲ್ಲಿ ಅಪೌಷ್ಠಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸಿ, ಅಪೌಷ್ಠಿಕತೆ ದೂರ ಮಾಡುವ ಪ್ರಯತ್ನ ನಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ.ನಾಗಭೂಷಣ ಉಡುಪ ಹೇಳಿದ್ದಾರೆ.
ಮಂಗಳವಾ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಅಯೋಜಿಸಿದ, ತೀವ್ರ ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಪೌಷ್ಠಿಕತೆ ಕುರಿತು ಆಪ್ತ ಸಮಾಲೋಚನಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಪೌಷ್ಠಿಕತೆ ಹೊಂದಿದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಮುಖ್ಯ ಕರ್ತವ್ಯ ಹಾಗೂ ಜವಾಬ್ದಾರಿ ಆರೋಗ್ಯ ಇಲಾಖೆಯದ್ದಾಗಿದೆ. ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ನೀಡಲು ಹಾಗೂ ಪೌಷ್ಠಿಕ ಕೇಂದ್ರಕ್ಕೆ ಸೇರಿಸಿ 14 ದಿನಗಳ ಕಾಲ ಅವರ ಆರೈಕೆ ಮಾಡಲು ಪೋಷಕರು ಕೂಡ ಅಗತ್ಯ ಸಹಕಾರ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಮುಂದಿನ 3 ತಿಂಗಳಲ್ಲಿ ಅಪೌಷ್ಠಿಕತೆಯಿಂದ ಬಳಲುವ ಎಲ್ಲಾ ಮಕ್ಕಳಿಗೆ ಅವರ ಪೋಷಕರು ಎನ್‌ಆರ್‌ಸಿ ಚಿಕಿತ್ಸೆ ಕೊಡಿಸಲು ಮುಂದಾಗ ಬೇಕು. ಇದರಿಂದ ಅಪೌಷ್ಠಿಕತೆ ಸಮಸ್ಯೆಯನ್ನು ದೂರ ಮಾಡಬಹುದು ಎಂದರು.
ಕಾರ್ಯಕ್ರಮದಲ್ಲಿ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ ಮಾತನಾಡಿ, ಜಿಲ್ಲೆಯ ಎಲ್ಲಾ ಮಕ್ಕಳು 1ನೇ ತರಗತಿ ಶಾಲೆಗೆ ಸೇರುವುದರ ಒಳಗೆ ಅವರ ಎತ್ತರ, ತೂಕ ಮತ್ತು ಅಪೌಷ್ಠಿಕತೆಯನ್ನು ಪರಿಶೀಲಿಸಬೇಕು. ಅಂತಹ ಸಮಸ್ಯೆಗಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಬೇಕು ಎಂದರು.
ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕಿ ಸುವರ್ಣ ಹೆಬ್ಬಾರ್, ಪೌಷ್ಠಿಕತೆ ಕುರಿತು ಮಕ್ಕಳ ತಾಯಂದಿರ ಜೊತೆಗೆ ಆಪ್ತ ಸಮಾಲೋಷನೆ ನಡೆಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಕುಮಾರಯ್ಯ, ನಿರೂಪಣಾಧಿಕಾರಿ ಬಿ.ಹೆಚ್.ಕೃಷ್ಣಪ್ಪ, ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿ, ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿ, ವಂದಿಸಿದರು.