ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಸೆರೆ

ಬೆಂಗಳೂರು, ಮಾ.5: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಪ್ರಕರಣದ ಪ್ರಮುಖ ರೂವಾರಿ ಎನ್ನಲಾದ ತೌಫೀಲ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಎಂದು ಎನ್‌ಐಎ ಮೂಲಗಳು ತಿಳಿಸಿವೆ.
ಆರೋಪಿಯು ಬೆಂಗಳೂರಿನಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಶನಿವಾರ ತಡರಾತ್ರಿ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಹತ್ತಕ್ಕೂ ಅಧಿಕ ಅಧಿಕಾರಿಗಳನ್ನೊಳಗೊಂಡ ತಂಡ ಮೊದಲು ತೌಫಿಲ್ ಮನೆಯೊಳಗೆ ಇರುವುದನ್ನು ಖಚಿತಪಡಿಸಿಕೊಂಡು ಬಂಧಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತçದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.ಆನಂತರ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ಎನ್‌ಐಎ ತನಿಖೆಗೆ ವಹಿಸಿತ್ತು.