ಸ್ವಚ್ಚ ಆಡಳಿತ ವಿಧಾನ ಮೈಗೂಡಿಸಿಕೊಳ್ಳಿ: ಅಧಿಕಾರಿಗಳಿಗೆ ಸಚಿವ ಎಂಟಿಬಿ ಸೂಚನೆ
ಬೆಂಗಳೂರು, ಮಾ. 6: ‘ಸ್ವಚ್ಛ, ದಕ್ಷ ಮತ್ತು ಪ್ರಾಮಾಣಿಕ ಆಡಳಿತ ವಿಧಾನವನ್ನು ಸರಕಾರಿ ನೌಕರರು ಮೈಗೂಡಿಸಿಕೊಳ್ಳಬೇಕು. ಇದರಿಂದ ಸರಕಾರದ ಆದಾಯ ಹೆಚ್ಚಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ’ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಇಂದಿಲ್ಲಿ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸಿಮ್ಯಾಕ್ ಸಂಸ್ಥೆಯು ಪೌರಾಡಳಿತ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಉತ್ತಮ ಪದ್ಧತಿಗಳ ದಾಖಲಿಕರಣವನ್ನು ಬಿಡುಗಡೆಗೊಳಿಸಿ ನಂತರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿತೆರಿಗೆ ಸಂಗ್ರಹಕ್ಕೆ ಒತ್ತು ನೀಡಿದ್ದೇವೆ. ನೇರ ಪಾವತಿ ಮೂಲಕ ಆಸ್ತಿ ತೆರಿಗೆ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.
‘3,885 ಕೋಟಿ ರೂ.ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಹಲವೆಡೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗಳು ಆರಂಭವಾಗಿವೆ. 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 8,691 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಅಮೃತ್-2.0 ಯೋಜನೆ ಪ್ರಗತಿಯಲ್ಲಿದೆ ಎಂದು ನಾಗರಾಜು ಹೇಳಿದರು.
ಇದೇ ವೇಳೆ ತ್ಯಾಜ್ಯ ಸಂಸ್ಕರಣೆಗಾಗಿ ಮಂಗಳೂರು ಮಹಾನಗರ ಪಾಲಿಕೆ, ಸಸಿ ನೆಡುವಿಕೆ ಮತ್ತು ಸಂಸ್ಕರಿತ ನೀರಿನ ಸದ್ಭಳಕೆಗಾಗಿ ಕಾರವಾರ ನಗರಸಭೆ ಹಾಗೂ ಹುಬ್ಬಳಿಯ ತೋಳನಕೆರೆ ಪುನರುಜ್ಜೀವನಕ್ಕಾಗಿ ಕೆಯುಐಡಿಎಫ್‍ಸಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯಆಯುಕ್ತ ತುಷಾರ್ ಗಿರಿನಾಥ್, ಬಿಡಬ್ಲ್ಯೂಎಸ್‍ಎಸ್‍ಬಿ ಅಧ್ಯಕ್ಷ ಎನ್.ಜಯರಾಮ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಎನ್.ಮಂಜುಶ್ರೀ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.