ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 6 ತಿಂಗಳು ಕಠಿಣ ಸಜೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಬಂಟ್ವಾಳ ತಾಲೂಕು ಬೊಳಂತೂರು ಗ್ರಾಮದ ನಿವಾಸಿ, ಆಟೋರಿಕ್ಷಾ ಚಾಲಕ ಅಬ್ದುಲ್ ರಹ್ಮಾನ್(26) ಶಿಕ್ಷೆಗೊಳಗಾದವನು.
2019ರ ನ.21ರಂದು ರಹ್ಮಾನ್ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ ನಿರೀಕ್ಷಕರಾದ ಅವಿನಾಶ್ ಮತ್ತು ಜಯರಾಮ್ ರೈ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಗೆ ಐಪಿಸಿ ಕಲಂ 354ಎ ಅಡಿಯಲ್ಲಿ 6 ತಿಂಗಳು ಕಠಿಣ ಸಜೆ, 10,000 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ ದಂಡದ ಮೊತ್ತವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.
Next Story