ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾಗೆ 7 ದಿನ ಈ.ಡಿ. ಕಸ್ಟಡಿ

ಹೊಸದಿಲ್ಲಿ, ಮಾ. 9: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ ನಾಯಕ ಮನೀಷ್ ಸಿಸೋಡಿಯಾ ಅವರನ್ನು ದಿಲ್ಲಿ ರೋಸ್ ಅವೆನ್ಯೂ ನ್ಯಾಯಾಲಯ ಮಾರ್ಚ್ 17ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.
ಮನೀಷ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ನಿನ್ನೆ ಬಂಧಿಸಿತ್ತು. ಇದಕ್ಕಿಂತ ಮೊದಲು ದಿಲ್ಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಕುರಿತಂತೆ ಸಿಬಿಐ ಅವರನ್ನು ಬಂಧಿಸಿತ್ತು. ಸಿಬಿಐ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇಂದು ನಡೆಸಿತು. ಅನಂತರ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.
ದಿಲ್ಲಿ ಅಬಕಾರಿ ನೀತಿಯಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮನೀಷ್ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿತ್ತು.
ಸಿಬಿಐ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಬಂಧಿಸಿತ್ತು. ಇದು ಕೂಡ ಈಗ ರದ್ದುಪಡಿಸಲಾದ ಅಬಕಾರಿ ನೀತಿಯ ರಚನೆ ಹಾಗೂ ಅನುಷ್ಠಾನದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ. ತರುವಾಯ ವಿಶೇಷ ನ್ಯಾಯಾಲಯ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿ ಇರಿಸಿತ್ತು.







