ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ; ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರಸ್ತೆ, ಧಾರವಾಡ ಐಐಟಿ ಲೋಕಾರ್ಪಣೆ
ಬೆಂಗಳೂರು, ಮಾ.12: ಪ್ರಧಾನಿ ನರೇಂದ್ರ ಮೋದಿ ರವಿವಾರ(ಮಾ.12) ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಹಾಗೂ ಧಾರವಾಡದ ಐಐಟಿ ಲೋಕಾರ್ಪಣೆ ಸೇರಿದಂತೆ ಸುಮಾರು 16ಸಾವಿರ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸುಮಾರು 8,480 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯನ್ನು ಪ್ರಧಾನಿ ಮೋದಿ ಮಂಡ್ಯದಲ್ಲಿ ಮಧ್ಯಾಹ್ನ 12 ಗಂಟೆಗೆ ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ, ಮೈಸೂರು-ಕುಶಾಲನಗರ ನಡುವಿನ ನಾಲ್ಕು ಪಥಗಳ 92 ಕಿ.ಮೀ. ಉದ್ದದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಂಡ್ಯದಿಂದ ಹುಬ್ಬಳ್ಳಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 3.15ರ ಸುಮಾರಿಗೆ ಧಾರವಾಡದಲ್ಲಿ 850 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಐಟಿಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಆನಂತರ, ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ 20 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ 1507 ಮೀಟರ್ ಉದ್ದದ ದೇಶದ ಅತಿದೊಡ್ಡ ರೈಲ್ವೆ ಪ್ಲಾಟ್‍ಫಾರಂ ಅನ್ನು ಅವರು ಉದ್ಘಾಟಿಸಲಿದ್ದಾರೆ.
ಅಭಿವೃದ್ಧಿಪಡಿಸಿರುವ ಹೊಸಪೇಟೆ ರೈಲ್ವೆ ನಿಲ್ದಾಣ, ಹೊಸಪೇಟೆ-ಹುಬ್ಬಳ್ಳಿ-ತಿನಾಯ್‍ಘಾಟ್ ರೈಲ್ವೆ ಮಾರ್ಗದ ವಿದ್ಯುದ್ದೀಕರಣವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಆನಂತರ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 520 ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದಲ್ಲದೆ, ಹುಬ್ಬಳ್ಳಿಯಲ್ಲಿ 250 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಯದೇವ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, 1040 ಕೋಟಿ ರೂ.ವೆಚ್ಚದ ಧಾರವಾಡದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, 150 ಕೋಟಿ ರೂ.ವೆಚ್ಚದ ತುಪ್ಪಾರಿಹಳ್ಳಿ ಪ್ರವಾಹ ನಿಯಂತ್ರಣ ಯೋಜನೆಗೆ ಪ್ರಧಾನಮಂತ್ರಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಸ್ವಾಗತಿಸಿ ಮಂಡ್ಯದಲ್ಲಿ ವಿವಾದಿತ 'ಉರಿಗೌಡ & ನಂಜೇಗೌಡ' ಹೆಸರಿನ ಫ್ಲೆಕ್ಸ್ ಪ್ರತ್ಯಕ್ಷ: ತೀವ್ರ ಆಕ್ಷೇಪ