ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ರಾಜ ಯಾನೆ ಜಪಾನ್ ಮಂಗ ಸೆರೆ

ಮಂಗಳೂರು, ಮಾ.14: ಮಂಗಳೂರು ಪೊಲೀಸ್ ಕಮಿಷನೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ ನಡೆದ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಕುಂಜತ್ತಬೈಲ್ ನಿವಾಸಿ ರಾಜ ಯಾನೆ ಜಪಾನ್ ಮಂಗ ಯಾನೆ ರೋಹನ್ ರೆಡ್ಡಿ (36) ಎಂಬಾತನನ್ನು ನಗರ ಅಪರಾಧ ಪತ್ತೆದಳದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ವಿಚಾರಣಾ ಸಮಯ ಹಾಜರಾಗದೆ 2017ರಿಂದ ತಲೆಮರೆಸಿಕೊಂಡಿದ್ದ. ಈತ ಬೆಂಗಳೂರಿನ ಕೋರಮಂಗಲ ಎಸ್‌ಜಿ ಪಾಳ್ಯದಲ್ಲಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಂದಲೇ ಬಂಧಿಸಿದ್ದಾರೆ.
ಈತನ ವಿರುದ್ಧ 2013ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿತ್ತು. ಆರೋಪಿಯ ವಿರುದ್ಧ ನ್ಯಾಯಾಲಯದ ಎಲ್‌ಪಿಸಿ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಮುಂದಿನ ಕ್ರಮಕ್ಕಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ರಾಜ ಯಾನೆ ಜಪಾನ್ ಮಂಗ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಾಗ ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಿ ಹೆಸರು ಮತ್ತು ವಿಳಾಸವನ್ನು ಆಧಾರ್ ಕಾರ್ಡ್‌ನ್ನು ಪಡೆದು ಈ ಮೂಲಕ ಸಿಮ್ ಕಾರ್ಡ್ ಪಡೆದು ಉಪಯೋಗಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
2022ರಲ್ಲಿ ಬೆಂಗಳೂರಿನ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ್ದ. ಅಲ್ಲದೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೂ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾದ್ದ ಎಂದು ತಿಳಿದು ಬಂದಿದೆ.