ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ: ಬಳ್ಳಾರಿಯಲ್ಲಿ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ

ಬಳ್ಳಾರಿ, ಮಾ.14: ಕರ್ನಾಟಕದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ. ಈ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿ, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮ ಕರೆ ನೀಡಿದರು.
ಮಂಗಳವಾರ ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತಕ್ಷೇತ್ರದ ಕುರುಗೋಡಿನಲ್ಲಿ ರೋಡ್ ಶೋದಲ್ಲಿ ಮಾತನಾಡಿದ ಅವರು, ಕರ್ನಾಟಕವು ಅಭಿವೃದ್ಧಿ ಪಥದಲ್ಲಿ ಸಾಗಲು ಡಬಲ್ ಎಂಜಿನ್ ಸರಕಾರ ಅಗತ್ಯ. ಇತ್ತೀಚೆಗೆ ನಡೆದ ಗುಜರಾತ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ರಾಜ್ಯವು ಸಮಗ್ರ ಅಭಿವೃದ್ಧಿ ಹೊಂದಲು ಬಿಜೆಪಿಯನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬಿ.ಶ್ರೀರಾಮುಲು, ಸಂಸದ ವೈ.ದೇವೇಂದ್ರಪ್ಪ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರುಪಾಕ್ಷಗೌಡ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.





