ಅಕ್ರಮ ಮರಳು, ಗಣಿಗಾರಿಕೆ, ಭ್ರಷ್ಟಾಚಾರ ವಿರುದ್ಧ ತನಿಖೆಗೆ ಒತ್ತಾಯಿಸಿ ಅಮರಣಾಂತ ಉಪವಾಸ: ಶೇಖರ ಲಾಯಿಲ
ಬೆಳ್ತಂಗಡಿ: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಒತ್ತಾಯಿಸಿ ಮಾ 27ರಿಂದ ಅಮರಣಾಂತ ಉಪವಾಸ ನಡೆಸುವುದಾಗಿ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ತಿಳಿಸಿದ್ದಾರೆ.
ಕಳೆದ ಐದು ದಿನಗಳಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಕಚೇರಿ ಅವಧಿಯಲ್ಲಿ ಧರಣಿ ನಡೆಸುತ್ತಿರುವ ಶೇಖರ ಲಾಯಿಲ ಅವರು ತನ್ನ ಧರಣಿಗೆ ಯಾವುದೇ ಸ್ಪಂದನೆ ಸಿಗದ ಕಾರಣ ಅಮರಣಾಂತ ಉಪವಾಸಕ್ಕೆ ಮುಂದಾಗುತ್ತಿರುವುದಾಗಿ ಪ್ರಕಟಿಸಿದ್ದಾರೆ.
ಧರಣಿ ಸ್ಥಳದಲ್ಲಿ ಮಾತನಾಡಿದ ಅವರು ಅಕ್ರಮ ಮರಳು ಗಣಿಗಾರಿಕೆ ವಿರುದ್ದ ಹೋರಾಟ ನಡೆಯುತ್ತಿರುವಾಗಲೇ ತಾಲೂಕಿನ ಮುಂಡಾಜೆಯಲ್ಲಿ ಅಕ್ರಮವಾಗಿ ಮರಳುಗಣಿಗಾರಿಕೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಅಕ್ರಮ ಮರಳುಗಣಿಗಾರಿಕೆ ವಿರುದ್ಧ ಧರಣಿ ನಡೆಯುತ್ತಿದ್ದರೂ ತಾಲೂಕು ಆಡಳಿತ ಇದಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ ಮರಳು ಮಾಫಿಯಾದ ಒತ್ತಡಕ್ಕೆ ತಾಲೂಕು ಆಡಳಿತ ಮಣಿಯುತ್ತಿದೆ ಇವರೊಂದಿಗೆ ಅಧಿಕಾರಿಗಳು ಶಾಮೀಲಾಗುತ್ತಿದ್ದಾರೆ ಎಂದು ಆರೋಪಿಸಿದರು.
ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ ಅವರು ಅಕ್ರಮ ಮರಳುಗಾರಿಕೆ ವಿರುದ್ದ ಕ್ರಮ ಕೈಗೊಳ್ಳುವ ವರೆಗೆ ಹೋರಾಟ ನಿರಂತರವಾಗಿ ಮುಂದುವರಿಸುವುದಾಗಿ ತಿಳಿಸಿದ ಅವರು ಮಾ.27 ರಿಂದ ಅಮರಣಾಂತ ಉಪವಾಸ ನಡೆಸುವುದಾಗಿ ಪ್ರಕಟಿಸಿದರು.