ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ; ವೈಟ್‍ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗ ಲೋಕಾರ್ಪಣೆ

ಬೆಂಗಳೂರು, ಮಾ.23: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹೊತ್ತಿನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಕಾಲೇಜು, ವೈಟ್‍ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಲಾಗುತ್ತಿದ್ದು, ಸತ್ಯಸಾಯಿ ಲೋಕಸೇವಾ ಸಂಸ್ಥೆಯೂ 350 ಕೋಟಿ ರೂ. ವೆಚ್ಚದಲ್ಲಿ ಈ ಕಾಲೇಜು ನಿರ್ಮಾಣ ಮಾಡಿದೆ.
ಎಚ್‍ಎಎಲ್ ಏರ್ಪೋರ್ಟ್‍ಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತಲುಪಲಿದ್ದಾರೆ. ಬೆಳಗ್ಗೆ 10.45ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ, ಸಂಶೋಧನಾ ಸಂಸ್ಥೆಯನ್ನು ಉದ್ಘಾಟನೆ ಮಾಡಲಿದ್ದಾರೆ.
ಆನಂತರ, ಮಧ್ಯಾಹ್ನ 12.55ಕ್ಕೆ ವೈಟ್‍ಫೀಲ್ಡ್-ಕೆ.ಆರ್.ಪುರ ಮೆಟ್ರೋ ಹೊಸ ಮಾರ್ಗ ಉದ್ಘಾಟನೆ ನೆರವೇರಿಸಲಿರುವ ಪ್ರಧಾನಿ, ಆನಂತರ ಬೆಂಗಳೂರಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.