ರಾಷ್ಟ್ರೀಯ ಪಕ್ಷದ ಮಾನ್ಯತೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಆಪ್

ಬೆಂಗಳೂರು, ಎ.6: ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತಂತೆ ಆಮ್ ಆದ್ಮಿ ಪಕ್ಷ ಸಲ್ಲಿಸಿರುವ ಮನವಿಯನ್ನು ಎ.13ರೊಳಗೆ ಪರಿಗಣಿಸುವಂತೆ ಹೈಕೋರ್ಟ್, ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅಲ್ಲದೆ, ಎ.13ಕ್ಕೆ ರಾಜ್ಯದಲ್ಲಿ ಚುನಾವಣಾ ಅಧಿಸೂಚನೆ ಹೊರಬೀಳಲಿದೆ.
ಈ ಹಿನ್ನೆಲೆಯಲ್ಲಿ ಅಷ್ಟರೊಳಗೆ ಚುನಾವಣಾ ಆಯೋಗ ಎಎಪಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕೋರಿ 2022ರ ಡಿ.19ರಂದು ಸಲ್ಲಿಸಿರುವ ಮನವಿ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥ ಮಾಡಿದೆ.
ದೇಶದಲ್ಲಿ ಯಾವುದೇ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ಅಥವಾ ಸ್ಥಾನಮಾನ ಪಡೆಯಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಬೆಳೆದಿರಬೇಕು. ನಾಲ್ಕು ರಾಜ್ಯಗಳಲ್ಲಿ ಕನಿಷ್ಠ ಶೇಕಡಾ 6ರಷ್ಟು ಮತ ಪಡೆದಿರಬೇಕು. ನವದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು, ರಾಷ್ಟ್ರೀಯ ಪಕ್ಷವಾಗುವ ಎಲ್ಲ ಷರತ್ತುಗಳನ್ನು ಪೂರೈಸಿದೆ.
ರಾಷ್ಟ್ರೀಯ ಪಕ್ಷದ ಸ್ಥಾನ ಮಾನ ನೀಡುವುದಕ್ಕೆ ಎಲ್ಲ ಅರ್ಹತೆಗಳನ್ನು ಹೊಂದಿದೆ. ಆದರೂ, ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಲು ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ಈ ಸಂಬಂಧ ಸೂಚನೆ ನೀಡಬೇಕು ಎಂದು ಕೋರಿ ಆಮ್ ಆದ್ಮಿ ಪಕ್ಷದಿಂದ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.







