ಜನರಲ್ಲಿ ಸ್ವಾರ್ಥವಿದೆ, ಹಣ ಪಡೆದು ಮತ ಹಾಕುತ್ತಿದ್ದಾರೆ: ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಎ.6: ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶದವರು ಮುಂದೆ ಬಂದು ಮನವಿ ಮಾಡುವಂತೆ ಕೋರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಸ್ಥಳೀಯ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಿದರೂ ಮುಂದೆ ಬಾರದ ಜನರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಲ್ಲರೂ ಸ್ವಾರ್ಥಿಗಳಾಗಿ ಬದಲಾಗುತ್ತಿದ್ದಾರೆ, ಹಣ ಪಡೆದು ಮತ ಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯವಾದ ಸ್ಮಶಾನ ಭೂಮಿ ಒದಗಿಸುವಂತೆ ಸರಕಾರಕ್ಕೆ ನೀಡಿದ್ದ ನಿರ್ದೇಶನ ಜಾರಿಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿವಾಸಿ ಮೊಹಮ್ಮದ್ ಇಕ್ಬಾಲ್ ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯಕ್ ಅವರಿದ್ದ ನ್ಯಾಯಪೀಠ ಗುರುವಾರ ಈ ಅರ್ಜಿ ವಿಚಾರಣೆ ನಡೆಸಿತು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆಯುತ್ತಿದೆ. ಆದರೂ, ಜನತೆಗೆ ಈವರೆಗೂ ಬುದ್ಧಿ ಬಂದಿಲ್ಲ. ಹಣ ಪಡೆದು ಮತ ಹಾಕುವ ಚಾಳಿ ಮುಂದುವರೆಸುತ್ತಿದ್ದಾರೆ. ಜನ ಎಚ್ಚೆತ್ತುಕೊಳ್ಳದಿದ್ದರೆ ನಾವೇನು ಮಾಡುವುದಕ್ಕೆ ಸಾಧ್ಯವಿಲ್ಲ. ಜನ ಸರಿಯಾದರೆ ಎಲ್ಲವೂ ಸರಿಯಾಗಲಿದೆ ಎಂದು ನ್ಯಾಯಪೀಠ ತಿಳಿಸಿತು.
ವಿಚಾರಣೆ ವೇಳೆ ಸರಕಾರದ ಪರವಾಗಿ ಹಾಜರಿದ್ದ ವಕೀಲರು, ಯಾವ ಯಾವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲ ಎಂಬುದರ ಕುರಿತು ಮಾಹಿತಿ ಪಡೆಯಲು ಪತ್ರಿಕಾ ಪ್ರಕಟಣೆ ಹೊರಡಿಸುವಂತೆ ನ್ಯಾಯಪೀಠ ಈ ಹಿಂದೆ ನೀಡಿದ್ದ ಸೂಚನೆ ಅನುಪಾಲನೆ ಮಾಡಿರುವ ಸಂಬಂಧ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಅಲ್ಲದೇ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಮಟ್ಟದ ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆದರೆ, ಈವರೆಗೂ ಯಾವುದೇ ಹಳ್ಳಿಯಿಂದ ಸ್ಮಶಾನ ಭೂಮಿ ಲಭ್ಯವಿಲ್ಲದ ಗ್ರಾಮದಿಂದ ಮನವಿ ಬಂದಿಲ್ಲ. ಮನವಿ ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠಕ್ಕೆ ವಿವರಿಸಿದರು. ಈ ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಎ.20ಕ್ಕೆ ಮುಂದೂಡಿತು.







