ಎ.12 ರಂದು ಉಚ್ಚಿಲದಲ್ಲಿ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ

ಉಡುಪಿ, ಎ.8: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಎ.12 ರಂದು ಬೆಳಗ್ಗೆ 10 ಗಂಟೆಗೆ ಕಾಪು ಉಚ್ಚಿಲ ಮೊಗವೀರ ಭವನದಲ್ಲಿ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶನಿವಾರ ನಡೆದ ಎ.12ರ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದ ಉಡುಪಿ ಜಿಲ್ಲಾ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.
ಸಮ್ಮೇಳನವನ್ನು ಯೋಜನಾಬದ್ಧ ಪೂರ್ವಸಿದ್ಧತೆ, ಸಕ್ರಿಯ ಭಾಗವಹಿಸುವಿಕೆ ಮೂಲಕ ಅತ್ಯಂತ ಯಶಸ್ವಿಗೊಳಿಸ ಬೇಕು ಎಂದು ಅವರು ಪಕ್ಷದ ಸಾಮಾಜಿಕ ಜಾಲತಾಣದ ಸಕ್ರಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.
ಸಾಮಾಜಿಕ ಜಾಲತಾಣ ಇಂದು ಪಕ್ಷದ ಬೆಳವಣಿಗೆ ಹಾಗೂ ಸರಕಾರದ ಸಕಾರಾತ್ಮಕ ಅಂಶಗಳ ಪ್ರಚಾರದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಯುವ ಕಾರ್ಯಕರ್ತರು ನಿಗದಿತ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಮ್ಮ ಹೆಸರನ್ನು ನೊಂದಾಯಿಸಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಮ್ಮೇಳನದಲ್ಲಿ ಪ್ರಧಾನ ಭಾಷಣ ಮಾಡಲಿದ್ದಾರೆ. ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುರ್ಮಾ ಕಟೀಲ್ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿಕಾಸ್ ಕುಮಾರ್ ಪುತ್ತೂರು ಸಹಿತ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅದರು ವಿವರಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಪೇಕ್ಷಿತರ ಜೊತೆಗೆ ಪಕ್ಷದ ವಿಚಾರಧಾರೆಯನ್ನು ಹೊಂದಿರುವ ಯುವ ಸಮುದಾಯವನ್ನು ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಜೋಡಿಸುವಲ್ಲಿ ಸಾಮಾಜಿಕ ಜಾಲತಾಣ ವಿಭಾಗ ಹಾಗೂ ಯುವ ಮೋರ್ಚಾ ತಂಡ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು. ಸಂಘಟಿತ ಪ್ರಯತ್ನದ ಮೂಲಕ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕ ಸುದೀಪ್ ಶೆಟ್ಟಿ ನಿಟ್ಟೆ ಉಪಸ್ಥಿತರಿದ್ದರು. ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಮಂಡಲ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ವಿಭಾಗದ ಪ್ರಮುಖರು ಭಾಗವಹಿಸಿದ್ದರು.
ಜಿಲ್ಲಾ ಮಾಧ್ಯಮ ಸಂಚಾಲಕ ನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.