ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ
ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ವಿತರಿಸುತ್ತಿ ರುವ ಗ್ಯಾರಂಟಿ ಕಾರ್ಡುಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.
ಉಡುಪಿ ಪುರಭವನದಲ್ಲಿ ನಡೆದ ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಈಡೇರಿಸಲು ಸಾಧ್ಯವಿಲ್ಲದ, ಕಾಂಗ್ರೆಸ್ಸಿನ ವಾರಂಟಿ ಇಲ್ಲದ ಗ್ಯಾರಂಟಿ ಕಾರ್ಡಿನ ವಾಸ್ತವಿಕತೆಯ ಬಗ್ಗೆ ಪಕ್ಷದ ಕಾರ್ಯಕರ್ತರು ಜನಮಾನಸದಲ್ಲಿ ಅರಿವು ಮೂಡಿಸಬೇಕು ಎಂದರು.
ವಿಧಾನಸಭಾ ಚುನಾವಣೆಯ ನಿರ್ವಹಣೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷರು, ಕೇಂದ್ರ ಸಚಿವರು, ಕೇಂದ್ರದ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ. ಸುಮಾರು 24 ಉಪ ಸಮಿತಿಗಳ ಮೂಲಕ ಜವಾಬ್ದಾರಿಯ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರವಾರು ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿ, ಉಡುಪಿ ಜಿಲ್ಲೆ ಮತ್ತು ವಿಧಾನ ಸಭಾ ಕ್ಷೇತ್ರವಾರು ಚುನಾವಣಾ ನಿರ್ವಹಣಾ ಸಮಿತಿಯ ಉತ್ತಮ ತಂಡ ರಚನೆಯಾಗಿದೆ. ಎಲ್ಲರೂ ತಮ್ಮ ಗುರುತರವಾದ ಜವಾಬ್ದಾರಿಯನ್ನು ಅರಿತು ಸಂಘಟಿತ ಪ್ರಯತ್ನದ ಮೂಲಕ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ದೊಡ್ಡ ಅಂತರದ ಗೆಲುವಿಗೆ ಶ್ರಮಿಸಿ, ರಾಜ್ಯಕ್ಕೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಉಡುಪಿ ಜಿಲ್ಲೆ ಹಾಗೂ ಉಡುಪಿ, ಕಾರ್ಕಳ, ಕಾಪು, ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ 24 ವಿಭಾಗಗಳ ಪ್ರತ್ಯೇಕ ಸಭೆಗಳನ್ನು ಆಯೋಜಿಸಲಾಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಸಮಾರೋಪ ಸಭೆಯನ್ನುದ್ದೇಶಿಸಿ ಮಾತನಾಡಿ ಮಾರ್ಗದರ್ಶನ ನೀಡಿದರು.
ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಸಂಚಾಲಕ ಮನೋಹರ್ ಎಸ್.ಕಲ್ಮಾಡಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ವಂದಿಸಿದರು.