ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಉಜಿರೆ ಗ್ರಾಪಂ ಅಧ್ಯಕ್ಷೆ ಸಹಿತ ಐವರು ಗಂಭೀರ

ಬೆಳ್ತಂಗಡಿ: ಕೊಟ್ಟಿಗೆ ಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ರವಿವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಪುಷ್ಪಾವತಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್ ಹಾಗೂ ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಸಹಿತ ಐವರು ಗಂಭೀರ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಪಾತಕ್ಕೆ ಬಿದ್ದವರನ್ನು ಸ್ಥಳೀಯರ ಸಹಕಾರದೊಂದಿಗೆ ಮೇಲೆತ್ತಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
