ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಹರೀಶ್ ಪೂಂಜಾ

ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಹರೀಶ್ ಪೂಂಜಾ ಅವರ ಹೆಸರನ್ನು ಬಿಜೆಪಿ ಘೋಷಿಸಿದೆ.
ಬೆಳ್ತಂಗಡಿ ತಾಲೂಕಿನ ಮುತ್ತಣ್ಣ ಪೂಂಜಾ ಹಾಗೂ ನಳಿನಿ ದಂಪತಿಯ ಪುತ್ರನಾಗಿರುವ ಹರೀಶ್ ಪೂಂಜಾ ವಿದ್ಯಾರ್ಥಿ ದೆಸೆಯಿಂದಲೇ ಎ.ಬಿ.ವಿ.ಪಿಯಲ್ಲಿ ಗುರುತಿಸಿಕೊಂಡಿದ್ದರು. ಬಿ.ಎಲ್.ಎಲ್.ಬಿ ಪದವೀಧರರಾಗಿರುವ ಇವರು ಆರ್.ಎಸ್.ಎಸ್ ನ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ತಾಲೂಕಿನ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಪ್ರಿಯರಾಗಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ಸಿನ ಹಿರಿಯ ಮುಖಂಡ ಕೆ. ವಸಂತ ಬಂಗೇರ ಅವರನ್ನು 22 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಹರೀಶ್ ಪೂಂಜಾ ತಮ್ಮ ನವ ಬೆಳ್ತಂಗಡಿ ಕಲ್ಪನೆಯೊಂದಿಗೆ ಕಾರ್ಯಪ್ರವೃತ್ತರಾಗಿದ್ದರು. ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆಗಳ ನಿರ್ಮಾಣ ಹಾಗೂ ಕಿಂಡಿ ಅಣೆಕಟ್ಟುಗಳು ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜನಪ್ರಿಯರಾಗಿದ್ದಾರೆ.
ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಹರೀಶ್ ಪೂಂಜಾ ಅವರು ಇದೀಗ ಎರಡನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಅವಕಾಶ ಪಡೆದಿದ್ದಾರೆ. ಇದರೊಂದಿಗೆ ಬೆಳ್ತಂಗಡಿಯಲ್ಲಿ ಇಬ್ಬರು ಯುವ ನಾಯಕರುಗಳ ನಡುವಿನ ಸ್ಪರ್ಧೆಗೆ ವೇದಿಕೆ ಸಿದ್ಧಗೊಂಡಿದೆ.