ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು, ಎ.14: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೊರ್ಟ್ ವಿಸ್ತರಿಸಿದೆ.
ಕನಕಪುರ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು, ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ತಡೆಯಾಜ್ಞೆ ವಿಸ್ತರಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ತನಿಖೆಗೆ ಅವಕಾಶ ನೀಡಿರುವುದು ನಿಯಮ ಬಾಹೀರವಾಗಿದೆ. ಸರಕಾರ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ರದ್ದು ಪಡಿಸಬೇಕು ಎಂದು ಕೋರಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಿಬಿಐ ಪರ ವಕೀಲರು, ತಮ್ಮ ವಾದಕ್ಕೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
ಪ್ರಕರಣವೇನು?: ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಪಡಿಸಬೇಕು ಎಂದು ಡಿಕೆಶಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವ ಕ್ರಮವನ್ನು ಪ್ರಶ್ನಿಸಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಗಳನ್ನು ವಿಚಾರಣೆ ನಡೆಯುತ್ತಿದೆ.