ಎ.15: ರಾಜ್ಯ ಹೈಕೋರ್ಟ್ ನೂತನ ನ್ಯಾಯಮೂರ್ತಿಗಳಿಗೆ ಉಡುಪಿ ವಕೀಲರ ಸಂಘದಿಂದ ಸನ್ಮಾನ
ಉಡುಪಿ: ಈ ಹಿಂದೆ ಉಡುಪಿಯಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ, ಇದೀಗ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಇತ್ತೀಚೆಗೆ ನೇಮಕಾತಿಗೊಂಡ ರಾಮಚಂದ್ರ ಡಿ. ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ ಟಿ. ಇವರನ್ನು ಉಡುಪಿ ವಕೀಲರ ಸಂಘದ ವತಿಯಿಂದ ಎ.15ರ ಶನಿವಾರ ಸನ್ಮಾನಿಸಲಾಗುತ್ತದೆ.
ಇವರೊಂದಿಗೆ ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದ ರಾಜೇಶ್ ರೈ ಕೆ. ಕೂಡಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು ಅವರನ್ನು ಸಹ ನಾಳೆ ಸಂಘ ಸನ್ಮಾನಿಸಲಿದೆ.
ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ. ವೀರಪ್ಪ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ನ ವಿಶ್ರಾಂತ ಮುಖ್ಯ ನ್ಯಾಯ ಮೂರ್ತಿ ಎಲ್. ನಾರಾಯಣ ಸ್ವಾಮಿ ಇವರು ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪಾವಂಜೆಯ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇದರಿಂದ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ‘ಸಂಪೂರ್ಣ ಶ್ರೀದೇವಿ ಮಹಾತೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.