ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು, ಎ.17;ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಮಂಗಳೂರು ಮಹಾನಗರ ಪಾಲಿಕೆ ಯಲ್ಲಿರುವ ಚುನಾವಣಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಅವರು ಮಂಗಳಾದೇವಿ, ಕದ್ರಿ, ರಥ ಬೀದಿ ವೆಂಕಟ್ರಮಣ, ಬಜಿಲಕೇರಿ ,ಕುದ್ರೋಳಿ ಕ್ಷೇತ್ರಗಳಿಗೆ ತೆರಳಿ ದೈವ ದೇವರುಗಳ ಆಶೀರ್ವಾದವನ್ನು ಪಡೆದುಕೊಂಡು ಕ್ಷೇತ್ರದ ಅಭಿಮಾನಿಗಳೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಸಿದರು.
"ನನ್ನ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ 4 ಸಾವಿರ ಕೋಟಿ ರೂಪಾಯಿ ಅನುದಾನದಲ್ಲಿ ಆಗಿರುವ ಅಭಿವೃದ್ಧಿ ಯೋಜನೆಗಳು, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಗಿರುವ ಯೋಜನೆಗಳು, ಆಡಳಿತ ಸುಧಾರಣೆಯ ಕೆಲಸಗಳಿಂದ ನಾನು ಕಳೆದ ಬಾರಿ 16ಸಾವಿರಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದೇನೆ. ಈ ಬಾರಿ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸುವ ವಿಶ್ವಾಸ ಹೊಂದಿರುವುದಾಗಿ ವೇದ ವ್ಯಾಸ ಕಾಮತ್ ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರ ಬೆಂಬಲದಿಂದ ಈ ಬಾರಿ ಮತ್ತೆ ಸ್ಪರ್ಧಿಸಲು ಅವಕಾಶ ದೊರೆತಿದೆ. ಈ ಬಾರಿಯೂ ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರರ ಬೆಂಬಲದಿಂದ ಪ್ರಚಂಡ ಬಹುಮತದಿಂದ ಜಯಗಳಿಸುವ ವಿಶ್ವಾಸ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದರಾದ ನಳಿನ್ ಕುಮಾರ್ ಕಟೀಲ್, ಪಕ್ಷದ ಮುಖಂಡರಾದ ಮೋನಪ್ಪ ಭಂಡಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ ಕುಮಾರ್ ಶೆಟ್ಟಿ, ಸುಧೀರ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.







