ಈಗ ಪಟಾಕಿ, ಬಿಜೆಪಿ ಗೆದ್ದರೆ ಬಾಂಬ್ ಸ್ಫೋಟ ಸಾಧ್ಯತೆ : ವಿನಯ ಕುಮಾರ್ ಸೊರಕೆ ಟೀಕೆ
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಉಡುಪಿ: ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದಾಗ ಮಣಿಪಾಲದ ಕಂಟ್ರಿ ಇನ್ ಹೊಟೇಲ್ ಎದುರು, ಕಟಪಾಡಿಯಲ್ಲಿ ಪಟಾಕಿ ಸಿಡಿಸಲಾಗಿತ್ತು. ಅಪ್ಪಿತಪ್ಪಿ ಬಿಜೆಪಿಯವರು ಗೆದ್ದು ಬಂದರೆ ಬಾಂಬ್ ಸ್ಫೋಟ ಕೂಡ ಆಗಬಹುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಟೀಕಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಕಾಂಚನ್ ನಾಮಪತ್ರ ಸಲ್ಲಿಕೆಗೆ ಮೊದಲು ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಉಡುಪಿ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡುತ್ತಿದ್ದರು.
ಕಳೆದ ಬಾರಿ ಸುಳ್ಳು ಪ್ರಚಾರದಿಂದ ಬಿಜೆಪಿ ಗೆಲುವು ಸಾಧಿಸಿದೆ. ಆದರೆ ಪ್ರತಿ ಬಾರಿಯೂ ಸುಳ್ಳು ನಡೆಯಲ್ಲ. ಉಡುಪಿ ಜಿಲ್ಲೆಯ ಮತದಾರರು ಪ್ರಬುದ್ಧರಾಗಿದ್ದಾರೆ. ಈ ದೇಶದ ಪ್ರಜಾಪ್ರಭುತ್ವ, ಜಾತ್ಯತೀತತೆ ಉಳಿಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಅವರು ಹೇಳಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಾಂಚನ ಮಾತನಾಡಿ, ಈ ಬಾರಿಯ ಚುನಾವಣೆ ನಮಗೆ ದೊಡ್ಡ ಸವಾಲು ಆಗಿದೆ. ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ವಿ.ಎಸ್.ಆಚಾರ್ಯ ನಿಧನದ ಬಳಿಕ ರಾಜ್ಯದಲ್ಲಿ ಬಿಜೆಪಿ ಧೂಳಿಪಟವಾಗಿದೆ ಎಂದು ಹೇಳಿದರು.
ಈ ಸಂದರ್ಭ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು, ಅಣ್ಣಯ್ಯ ಸೇರಿಗಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ, ಕಾಂಗ್ರೆಸ್ ಮುಖಂಡರಾದ ವರೋನಿಕಾ ಕರ್ನೆಲಿಯೊ, ಪ್ರಖ್ಯಾತ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಮೈರ್ಮಾಡಿ ಸುಧಾಕರ್ ಶೆಟ್ಟಿ, ಮಮತಾ ಶೆಟ್ಟಿ, ರಾಮದಾಸ್ ನಾಯ್ಕ್, ಜಯ ಕುಮಾರ್, ಸರಳ ಕಾಂಚನ್, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿದರು. ಡಾ.ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







