ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ ಜಾಥದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

ಕಾಪು, ಎ.19: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಸಲು ಮಂಗಳವಾರ ಕಾಪುವಿನಲ್ಲಿ ನಡೆದ ಜಾಥದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾಧಿಕಾಗಳ ಕಛೇರಿಯ ಚುನಾವಣಾ ವಿಭಾಗದಿಂದ ಬಂದ ಮಾಹಿತಿಯಂತೆ ಕಾಪು ವಿಧಾನಸಭಾ ಕ್ಷೇತ್ರದ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಅಬ್ದುಲ್ ರಜಾಕ್ ದಾಳಿ ನಡೆಸಿದಾಗ, ಕಾಂಗ್ರೆಸ್ ಪಕ್ಷದ ವತಿಯಿಂದ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಸಲು ಆಯೋಜಿಸಲಾದ ರ್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ಕಾಪು ರಾಜೀವ ಸಭಾಭವನದಲ್ಲಿ ಚುನಾವಣಾಧಿಕಾರಿಗಳಿಂದ ಅನುಮತಿಯನ್ನು ಪಡೆಯದೇ ಸುಮಾರು 1000 ಭೋಜನ ವ್ಯವಸ್ಥೆ ಹಾಗೂ ಕುಡಿಯುವ ನೀರು ವಿತರಿಸುತ್ತಿರುವುದು ಕಂಡು ಬಂದಿದೆ. ಅದರಂತೆ ತಂಡ ಅಲ್ಲಿಂದ 38 ಹಾಳೆಯ ತಟ್ಟೆಗಳನ್ನು ಹಾಗೂ ನೀರಿನ ಬಾಟಲಿ ಇರುವ ಒಂದು ಬಂಡಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಜಾಥ ನಡೆಸಲು ಅನುಮತಿ ಪಡೆದುಕೊಂಡ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.