ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ: ಚುನಾವಣಾಧಿಕಾರಿಗಳ ಮಧ್ಯಪ್ರವೇಶಕ್ಕೆ 'ನೈಜ ಹೋರಾಟಗಾರರ' ವೇದಿಕೆ ಆಗ್ರಹ
ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಕೊಡಗಿನ ಹೊದ್ದೂರು ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಎ. 21: ‘ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿರುವ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮದ ಕಾನ್ಸಿರಾಂ ನಗರದ ನಿವಾಸಿಗಳ ಸಮಸ್ಯೆ ಇತ್ಯರ್ಥಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶ ಮಾಡಿ ಜಿಲ್ಲಾಧಿಕಾರಿಗೆ ಸೂಕ್ತ ನಿರ್ದೆಶನ ನೀಡಿ ಸಮಸ್ಯೆ ಬಗೆಹರಿಸಬೇಕು’ ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.
ಶುಕ್ರವಾರ ಈ ಸಂಬಂಧ ವೇದಿಕೆ ಮುಖಂಡ ಎಚ್.ಎಂ.ವೆಂಕಟೇಶ್ ಮನವಿ ಸಲ್ಲಿಸಿದ್ದು, ‘ಮಡಿಕೇರಿ ಕ್ಷೇತ್ರದ ಮೇಲ್ಕಂಡ ಗ್ರಾಮದ ಸುತ್ತಮುತ್ತಲಿನ ನಿವಾಸಿಗಳು 16 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಕೊಡಗು ಜಿಲ್ಲಾಧಿಕಾರಿ ನೀಡಿದ ಆಶ್ವಾಸನೆಯನ್ನು ಈಡೇರಿಸಿಲ್ಲ. ಹೀಗಾಗಿ ಗ್ರಾಮಸ್ಥರು ಕಠಿಣ ತೀರ್ಮಾನ ಮಾಡಿದ್ದಾರೆಂದು ತಿಳಿಸಿದ್ದಾರೆ.
ಚುನಾವಣಾ ಆಯೋಗದ ಮೇಲೆ ಜವಾಬ್ದಾರಿ ಇದೆ. ಹೀಗಾಗಿ ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೂಡಲೇ ಮಧ್ಯಪ್ರವೇಶಿಸಬೇಕು. ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಗ್ರಾಮಸ್ಥರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಆ ಮೂಲಕ ಗ್ರಾಮಸ್ಥರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ವೆಂಕಟೇಶ್ ಕೋರಿದ್ದಾರೆ.








