ಎ.27ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ, 24ಕ್ಕೆ ಖರ್ಗೆ ಆಗಮನ

ಮಂಗಳೂರು, ಎ.23: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಎ.27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸ ಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಜೆ 4 ಗಂಟೆಗೆ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇರಳದ ಶಾಸಕ ರೋಝಿ ಜಾನ್, ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಚಂದ್ರ ಆಳ್ವ, ಸಂತೋಷ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.