ಲಾರಿ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಬೆಂಗಳೂರು, ಎ.25: ಶರವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡದಿದೆ.
ಮಂಗಳವಾರ ಮುಂಜಾನೆ ಇಲ್ಲಿನ ನಾಯಂಡಹಳ್ಳಿ ಜಂಕ್ಷನ್‍ನಲ್ಲಿ ಈ ಘಟನೆ ನಡೆದಿದ್ದು, ರಾಯಚೂರು ಮೂಲದ ಮುಹಮ್ಮದ್ ಎಂಬುವರು ಮೃತಪಟ್ಟವರು, ಘಟನೆಯಲ್ಲಿ ಗಾಯಗೊಂಡಿರುವ ಉತ್ತರಪ್ರದೇಶ ಮೂಲದ ಗೋರಕ್ (21) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ಡಾ.ಸುಮನ್ ಪನ್ನೇಕರ್ ಮಾಹಿತಿ ನೀಡಿದ್ದಾರೆ.
ಪೇಂಟರ್ ಕೆಲಸ ಮಾಡುತ್ತಿದ್ದ ಇವರಿಬ್ಬರೂ ಯಶವಂತಪುರದಿಂದ ಕೆಲಸಕ್ಕೆ ಮಂಗಳವಾರ ಮುಂಜಾನೆ 10 ಗಂಟೆ ಸುಮಾರಿಗೆ ಸ್ಕೂಟರಿನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಮಾರ್ಗ ಮಧ್ಯದ ನಾಯಂಡಹಳ್ಳಿ ಜಂಕ್ಷನ್‍ನಲ್ಲಿ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ಬ್ಯಾಟರಾಯನಪುರ ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.