ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಆರೋಗ್ಯಾಧಿಕಾರಿ

ಬೆಂಗಳೂರು, ಎ.27: ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆಗೆ ಗುತ್ತಿಗೆ ಪಡೆದಿದ್ದ ವ್ಯಕ್ತಿಗೆ ಬಾಕಿ ಹಣ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬಿಬಿಎಂಪಿ ವೈದ್ಯಕೀಯ ಆರೋಗ್ಯಾಧಿಕಾರಿ ಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ಸಿ.ವಿ.ರಾಮನ್ ನಗರ ವಾರ್ಡ್‍ನ ಆರೋಗ್ಯಾಧಿಕಾರಿ ಶಿವೇಗೌಡ ಎಂಬುವರನ್ನು 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ.
ವ್ಯಕ್ತಿಯೊಬ್ಬರು ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆಗೆ ಬಿಬಿಎಂಪಿಯಿಂದ ಗುತ್ತಿಗೆ ಪಡೆದಿದ್ದರು. ಪಾವತಿಸಬೇಕಾದ ಹಣಕ್ಕೆ ಪ್ರತಿಯಾಗಿ 80 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ವೈದ್ಯಾಧಿಕಾರಿ ಶಿವೇಗೌಡ, 30 ಸಾವಿರ ಮುಂಗಡವಾಗಿ ಸ್ವೀಕರಿಸಿದ್ದರು. ಉಳಿದ 50 ಸಾವಿರ ರೂ. ಲಂಚ ಸ್ವೀಕರಿಸುವಾಗ ಕಾರ್ಯಾಚರಣೆ ನಡೆಸಿ, ಪ್ರಕರಣ ಭೇದಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.
Next Story