ಪ್ರಚಾರದ ವೇಳೆ ಮುಖಾಮುಖಿ: ಸಿ.ಟಿ.ರವಿ-ಎಚ್.ಡಿ.ತಮ್ಮಯ್ಯ ಬೆಂಬಲಿಗರ ನಡುವೆ ವಾಗ್ವಾದ, ತಳ್ಳಾಟ

ಚಿಕ್ಕಮಗಳೂರು, ಎ.28: ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿರುವಂತೆ ಪ್ರಮುಖ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮರಿ ಅಲ್ಲಲ್ಲಿ ನಡೆಯುತ್ತಿರುವುದು ವರದಿಯಾಗುತ್ತಿದೆ. ಶುಕ್ರವಾರ ಕಾಫಿನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯ ಸಿ.ಟಿ.ರವಿ ಹಾಗೂ ಕಾಂಗ್ರೆಸ್‍ನ ಎಚ್.ಡಿ.ತಮ್ಮಯ್ಯ ಬೆಂಬಲಿಗರ ನಡುವೆ ವಾಗ್ವಾದ, ಮಾತಿನಚಮಕಿ, ತಳ್ಳಾಟ ನಡೆದಿರುವ ಘಟನೆ ವರದಿಯಾಗಿದೆ.
ಶುಕ್ರವಾರ ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯ ಸಾದರಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಕೂಡ ಇದೇ ಗ್ರಾಮದಲ್ಲಿ ಪ್ರಚಾರ ನಡೆಸಿದ್ದರು. ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳೊಂದಿಗೆ ರೋಡ್ ಶೋ ನಡೆಸುತ್ತಿದ್ದ ವೇಳೆ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಮುಖಾಮುಖಿಯಾಗಿದ್ದಾರೆ.
ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ ಅಭಿವೃದ್ಧಿ ನಿರ್ಲಕ್ಷ್ಯಿಸಿದ್ದಾರೆಂದು ಟೀಕಿಸಿದ್ದಾರೆ. ಇದರಿಂದ ಕುಪಿತರಾದ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಕೂಗಾಟ ನೆಡೆಸಿ ಕೂಗಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆದು ಪರಸ್ಪರ ತಳ್ಳಾಡಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವುದನ್ನು ಅರಿತ ತಮ್ಮಯ್ಯ, ತಮ್ಮ ಕಾರ್ಯಕರ್ತರನ್ನು ಸಮಾಧಾನಪಡಿಸಿ ಮನವೊಲಿಸಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಒಟ್ಟಿನಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಸಿ.ಟಿ.ರವಿ ಹಾಗೂ ಅವರ ಆಪ್ತ ಕಾಂಗ್ರೆಸ್‍ನ ಎಚ್.ಡಿ. ತಮ್ಮಯ್ಯ ಅವರು ಚುನಾವಣೆ ಗೆಲ್ಲಲು ಜಿದ್ದಾಜಿದ್ದಿನಿಂದ ಪ್ರಚಾರ ನಡೆಸುತ್ತಿದ್ದು, ಕ್ಷೇತ್ರದಲ್ಲಿ ಚುನಾವಣೆ ಕಾವು ತಾರಕಕ್ಕೇರುತ್ತಿದೆ.







