ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'
ಬೆಂಗಳೂರು, ಮೇ.1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಗುಡುಗು ಸಿಡಿಲಿನಿಂದ ಕೂಡಿದ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ.
ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆ ಕೋರಮಂಗಲ, ಮಡಿವಾಳ, ಶಾಂತಿನಗರ, ಬಸವನಗುಡಿ, ಚಾಮರಾಜಪೇಟೆ, ಎಂ.ಜಿ.ರಸ್ತೆ, ಇಂದಿರಾನಗರ, ಶಿವಾಜಿನಗರ, ಹಲಸೂರು ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಜೋರಾಗಿ ಸುರಿಯಿತು.
ಈ ಪ್ರದೇಶಗಳ ರಸ್ತೆಯಲ್ಲೆಲ್ಲ ನೀರು ಹರಿಯಿತು. ರಾಜಕಾಲುವೆ ಹಾಗೂ ಚರಂಡಿಯ ತ್ಯಾಜ್ಯ ರಸ್ತೆಗೆ ಬಂದಿತ್ತು. ಇನ್ನೂ, ಮಳೆ ನೀರು ರಸ್ತೆಯಲ್ಲಿ ಹರಿದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಶಿವಾನಂದ ವೃತ್ತ, ಮೆಜೆಸ್ಟಿಕ್ ಬಳಿಯ ರೈಲ್ವೆ ಕೆಳ ಸೇತುವೆಯಲ್ಲೂ ನೀರು ನಿಂತುಕೊಂಡಿತ್ತು. ಈ ರಸ್ತೆಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಾಗಿದವು.
ಹೊಸೂರು ರಸ್ತೆ, ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕನಕಪುರ ರಸ್ತೆಯಲ್ಲೂ ಮಳೆ ಜೋರಾಗಿತ್ತು. ಅಲ್ಲೆಲ್ಲ ವಾಹನಗಳ ದಟ್ಟಣೆ ಸಾಮಾನ್ಯವಾಗಿತ್ತು.
ಒಟ್ಟಾರೆ ದಿಢೀರ್ ಮಳೆಯಬ್ಬರಕ್ಕೆ ರಾಜಧಾನಿ ಜನರಿಗೆ ದಂಗು ಬಡಿದಂತಾಗಿದೆ. ಇನ್ಬೇರಡು ದಿನದವರೆಗೂ ಮಳೆಯಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಲ್ಲೋ ಅಲರ್ಟ್: ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಬೀದರ್, ಕಲಬುರುಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೇ 3 ರವರೆಗೆ ಭಾರಿ ಮಳೆಯಾಗಲಿದೆ.
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಣನೀಯವಾಗಿ ಇಳಿಕೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.