ಕಾಂಗ್ರೆಸ್ ಪಕ್ಷ ಬೆಂಬಲಿಸಲು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕರೆ

ಮಂಗಳೂರು: ದಲಿತ ವಿರೋಧಿಯಾಗಿರುವ ಮತ್ತು ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಯು ಮತ್ತೆ ಸರಕಾರ ನಡೆಸುವುದನ್ನು ತಡೆಗಟ್ಟುವ ಸಲುವಾಗಿ ಪ್ರಬಲ ಜಾತ್ಯತೀತ ಪಕ್ಷವಾದ ಕಾಂಗ್ರೆಸ್ಸನ್ನು ಬೆಂಬಲಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಕರೆ ನೀಡಿದೆ.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಸಂಚಾಲಕ ಎಂ. ದೇವದಾಸ್ ‘ಬಿಜೆಪಿ ಸರಕಾರವು ಜಾನುವಾರು ಹತ್ಯೆ ನಿಷೇಧ ಕಾಯ್ದೆ, ಭೂ ಸುಧಾ ರಣಾ ಕಾಯ್ದೆ, ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ದಲಿತರು, ರೈತರು, ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿದೆ. ಸದಾ ಜನರನ್ನು ಶೋಷಿಸುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಬೇಕಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ರಾಜ್ಯಾದ್ಯಂತ ಬೆಂಬಲಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.
ಶಿಕ್ಷಣ ತಜ್ಞನಲ್ಲದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಲ್ಲದೆ ನಾರಾಯಣಗುರು, ಅಂಬೇಡ್ಕರ್, ಬಸವಣ್ಣ, ಕುವೆಂಪು, ಟಿುಪ್ಪು ಸುಲ್ತಾನ್ ಮತ್ತಿತರ ಪ್ರಮುಖರ ವಿಚಾರವನ್ನು ಪಠ್ಯಪುಸ್ತಕದಿಂದ ಕೈ ಬಿಟ್ಟು ಕೇಸರೀಕರಣಕ್ಕೆ ಒತ್ತು ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರವು ನೀಡುತ್ತಿದ್ದ ಶೇ.75ರಷ್ಟು ಅನುದಾನವನ್ನು ತಡೆಹಿಡಿಯುವ ಮೂಲಕ ದಲಿತರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿದೆ. ಸ್ವ ಉದ್ಯೋಗಕ್ಕಾಗಿ ಪರಿಶಿಷ್ಟ ಜಾತಿಯ ಯುವಕರು ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಲ್ಲಿಸಿದ ಅರ್ಜಿಗೆ ಸೂಕ್ತ ಸ್ಪಂದನ ಸಿಕ್ಕಿಲ್ಲ. ಆ ಮೂಲಕ ಬಿಜೆಪಿಯು ದಲಿತ ವಿರೋಧಿಯಾಗಿ ಕಾರ್ಯನಿರ್ವಹಿಸಿದೆ ಎಂದರು.
ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಬ್ರಿಟಿಷ್ ಸರಕಾರದ ಅವಧಿಯಲ್ಲಿ ನೀಡಲಾದ ಡಿಸಿ ಮನ್ನಾ ಜಾಗವನ್ನು ನಿವೇಶನ ರಹಿತ ದಲಿತರಿಗೆ ನೀಡಲು ಹೋರಾಟ ನಡೆಸುತ್ತಿದ್ದರೂ ಇನ್ನೂ ನಿವೇಶನ ಮಂಜೂರಾಗಿಲ್ಲ. ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸದೆ, ಬೆಲೆ ಏರಿಕೆಯನ್ನು ತಡೆಗಟ್ಟದೆ ಪ್ರತಿ ಯೊಂದಕ್ಕೂ ಶೇ.40 ಕಮಿಷನ್ ಪಡೆಯುವಲ್ಲಿ ಬಿಜೆಪಿ ಆಸಕ್ತಿ ವಹಿಸಿದೆಯೇ ವಿನಃ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿಲ್ಲ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕ ರಮೇಶ್ ಕೋಟ್ಯಾನ್, ಸಂಚಾಲಕರಾದ ರಘು ಕೆ. ಎಕ್ಕಾರು, ರಮೇಶ್ ಕಾವೂರು, ಶೇಖರ್ ಚಿಲಿಂಬಿ, ಯಶೋಧಾ ಹೊಸಬೆಟ್ಟು, ಸರೋಜಿನಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.