ಕಲಬುರಗಿ: ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಈಶ್ವರಪ್ಪ

ಕಲಬುರಗಿ, ಮೇ 4: ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದರು.
ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ನಿಷೇಧಿತ ಪಿಎಫ್ಐಯನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿರುವುದು ಹಾಸ್ಯಾಸ್ಪದವಾಗಿದೆ. ಬಜರಂಗದಳ ಧರ್ಮ ರಕ್ಷಣೆಗಾಗಿ ಇರುವ ಸಂಘಟನೆ. ಅದನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸುವ ಮೂಲಕ ಆ ಪಕ್ಷ ರಾಷ್ಟದ್ರೋಹಿ ಮನಸ್ಥಿತಿ ಹೊಂದಿದೆ ಎಂಬುದನ್ನು ತೊರಿಸಿಕೊಟ್ಟಿದೆ ಎಂದು ಟೀಕಿಸಿದರು.
ಅಧಿಕಾರ ಆಸೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜಾತಿ ರಾಜಕಾರಣ ಮಾಡುತ್ತಿದ್ದಾರೆ, ಕಾಂಗ್ರೆಸ್ ಪ್ರಣಾಳಿಕೆ ಮುಹಮ್ಮದ್ ಅಲಿ ಜಿನ್ನಾ ಅವರ ಮುಸ್ಲಿಂ ಲೀಗ್ ಪಕ್ಷದ ಪ್ರಣಾಳಿಕೆ ಇದ್ದಂತೆ ಇದೆ. ಕೂಡಲೇ ಈ ರಾಷ್ಟದ್ರೋಹಿ ಪ್ರಣಾಳಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.








