ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಲೋಕಾಯುಕ್ತಕ್ಕೆ ದೂರು
ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ

ಬೆಳ್ತಂಗಡಿ: ನಗರದಲ್ಲಿ ನಿರ್ಮಾಣಗೊಂಡಿರುವ ಐಬಿಯ ಕಾಮಗಾರಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
ಶಾಸಕ ಹರೀಶ್ ಪೂಂಜಾ, ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಯಶವಂತ್, ಇಲಾಖೆಯ ಜೂನಿಯರ್ ಇಂಜಿನಿಯರ್ ತೌಸೀಫ್ ಅಹ್ಮದ್, ಎ.ಇ.ಇ ಶಿವಪ್ರಸಾದ್ ಅಜಿಲ, ಗುತ್ತಿಗೆದಾರ ಪ್ರವೀಣ್ ಕುಮಾರ್ ಎಂಬವರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.
ಬೆಳ್ತಂಗಡಿ ಪ್ರವಾಸಿ ಮಂದಿರ ನಿರ್ಮಾಣದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಶಾಸಕ ಹರೀಶ್ ಪೂಂಜಾ ಅವರು ಪ್ರವಾಸಿ ಮಂದಿರದ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಇದೀಗ ಇದೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಇದೀಗ ಶಾಸಕ ಹರೀಶ್ ಪೂಂಜಾ ಅವರು ಪ್ರವಾಸಿ ಮಂದಿರದ ಕಾಮಗಾರಿ ಪೂರ್ಣಗೊಂಡಿದೆ ಎಂದು ಅದರ ಉದ್ಘಾಟನೆಯನ್ನು ನೆರವೇರಿಸಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಎರಡು ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರದ ಕಾಮಗಾರಿಗಾಗಿ ಟೆಂಡರ್ ಕರೆಯುವ ಕಾರ್ಯವೂ ನಡೆದಿದೆ. ಇದನ್ನು ಗಮನಿಸಿದರೆ ಈ ಕಟ್ಟಡದ ಕಾಮಗಾರಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದೆ ಎಂಬುದು ಹೊರನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
ಇದೇ ಗುತ್ತಿಗೆದಾರ ವಿರುದ್ಧ ವಿವಿದೆಡೆ ಕಳಪೆ ಕಾಮಗಾರಿಯ ಆರೋಪ ಇರುವಾಗಲೇ ಅವರಿಗೆ ಮತ್ತೆ ಎರಡು ಕೋಟಿಯ ಕಾಮಗಾರಿಯನ್ನು ಇದೀಗ ನೀಡಲಾಗಿರುವುದು ಭ್ರಷ್ಟಾಚಾರಕ್ಕೆ ಅವಕಾಶ ಒದಗಿಸಿದಂತಾಗಿದೆ. ಇದರಲ್ಲಿ ಶಾಸಕ ಹರೀಶ್ ಪೂಂಜಾ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಹಾಗೂ ಗುತ್ತಿಗೆ ದಾರ ಶಾಮೀಲಾಗಿ ಸರಕಾರದ ಹಣವನ್ನು ಭ್ರಷ್ಟಾಚಾರ ನಡೆಸಿ ಅಪಹರಿಸುವ ಪ್ರಯತ್ನ ನಡೆಸಿದ್ದಾರೆ. ಆರೋಪಿಗಳು ಯೋಜನೆಯ ಬಗ್ಗೆ ಸರಿಯಾದ ಮಾಹಿತಿಗಳನ್ನು ನೀಡದೆ ಮಾಹಿತಿಗಳನ್ನು ಮುಚ್ಚಿಟ್ಟು ಭ್ರಷ್ಟಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.