ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪೂರಕ ಚಾರ್ಜ್‍ಶೀಟ್ ಸಲ್ಲಿಸಿದ ಎನ್‍ಐಎ

ಬೆಂಗಳೂರು, ಮೇ 4: ಬಿಜೆಪಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್‍ಐಎ) ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ.
ಪ್ರಮುಖ ಆರೋಪಿ ತುಫೈಲ್ ಎಂ.ಎಚ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ್ ಚಾರ್ಜ್‍ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದಂತಾಗಿದೆ.
2022ರ ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್‍ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್‍ನಲ್ಲಿ ಆಗಮಿಸಿದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅವರು ಮಾರ್ಗಮಧ್ಯೆದಲ್ಲೇ ಮೃತಪಟ್ಟಿದ್ದರು.
ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.
ಮಹಮ್ಮದ್ ಜಾಬಿರ್ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷನಾಗಿದ್ದು , ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿ ನಡೆದಿದ್ದ ಸಭೆಗಳಲ್ಲಿ ಭಾಗಿಯಾಗಿದ್ದ. ಪ್ರಚೋದನಕಾರಿ ಭಾಷಣಗಳನ್ನ ಮಾಡಿದ್ದ ಎಂದು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ.





