ಕುಸ್ತಿಪಟುಗಳನ್ನು ಬೆಂಬಲಿಸಿ ರೈತರ ಪ್ರತಿಭಟನೆ: ಭದ್ರತೆ ಹೆಚ್ಚಿಸಿದ ದಿಲ್ಲಿ ಪೊಲೀಸರು
ಹೊಸದಿಲ್ಲಿ: ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಬೆಂಬಲಿಸಿ ದಿಲ್ಲಿ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಘೋಷಿಸಿದ ನಂತರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ರವಿವಾರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ರನ್ನು ಬಂಧಿಸಬೇಕು ಹಾಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ 10 ದಿನಗಳಿಂದ ಜಂತರ್ ಮಂತರ್ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಂಜಾಬ್, ಹರ್ಯಾಣ, ದಿಲ್ಲಿ ಹಾಗೂ ಉತ್ತರ ಪ್ರದೇಶದಿಂದ ಸಂಘಟನೆಯ ಹಲವಾರು ಮುಖಂಡರು ಜಂತರ್ ಮಂತರ್ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ ಹಾಗೂ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡುತ್ತಾರೆ ಎಂದು ಎಸ್ ಕೆ ಎಂ ಶನಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಈಗ ರದ್ದಾಗಿರುವ ಕೇಂದ್ರ ಸರಕಾರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಒಂದು ವರ್ಷ ಕಾಲ ನಡೆದಿದ್ದ ರೈತರ ಪ್ರತಿಭಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಮುನ್ನಡೆಸಿತ್ತು.
ಶುಕ್ರವಾರ, ಹರ್ಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಜಂತರ್ ಮಂತರ್ ಬಳಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಬೆಂಬಲ ನೀಡಿದ್ದರು.