ದ.ಕ. ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ ಆತ್ಮಹತ್ಯೆ

ಮಂಗಳೂರು: ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ (56) ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರ್ಕೆ ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ವಿವೇಕಾನಂದ ತಾನು ವಾಸ್ತವ್ಯವಿದ್ದ ಬಿಜೈಯ ವಸತಿ ಸಂಕೀರ್ಣದ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.
ಚುನಾವಣಾ ಕರ್ತವ್ಯ ನಿರ್ವಹಿಸಿದ್ದ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅವರು ಕೆಲವು ದಿನಗಳಿಂದ ಒತ್ತಡದಲ್ಲಿದ್ದರು ಎನ್ನಲಾಗಿದೆ. ಮೂಲತಃ ಸಾಗರದ ನಿವಾಸಿಯಾಗಿದ್ದ ವಿವೇಕಾನಂದ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಿಜೈಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story