ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿತ

ದಾವಣಗೆರೆ: ಕಾಂಗ್ರೆಸ್ ಕಾರ್ಯಕರ್ತನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹೊನ್ನಾಳಿ ಕ್ಷೇತ್ರದ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ರವಿವಾರ ರಾತ್ರಿ ವರದಿಯಾಗಿದೆ.
ಮಧು (24) ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದರು. ಈ ವೇಳೆ ಪಟಾಕಿ ಸಿಡಿಸಿದ ವಿಚಾರಕ್ಕೆ ಗಲಾಟೆ ನಡೆದಿದ್ದು, ರೇಣುಕಾಚಾರ್ಯರ ಬೆಂಬಲಿಗರು ಎನ್ನಲಾದ ಕೆಲವರು ಮಧು ಎಂಬವರಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಪೊಲೀಸರು, 'ಇದು ವೈಯಕ್ತಿಕ ವಿಚಾರಕ್ಕೆ ನಡೆದ ಗಲಾಟೆ' ಎಂದು ತಿಳಿಸಿದರು.





