ನಾಗಪುರದಿಂದ ಬಂದವರು ಮುಖ್ಯಮಂತ್ರಿ ಆಯ್ಕೆ ಮಾಡುವ ಸಂಸ್ಕೃತಿ ನಮ್ಮಲ್ಲಿಲ್ಲ: ಬಿ.ಕೆ.ಹರಿಪ್ರಸಾದ್
ಬೆಂಗಳೂರು, ಮೇ 15: ‘ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ. ಮುಖ್ಯಮಂತ್ರಿ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವೂ ಇಲ್ಲ’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರಂತೆ ತಿಂಗಳುಗಳ ಕಾಲ ಮುಖ್ಯಮಂತ್ರಿ ಆಯ್ಕೆ ಮಾಡದೆ ಇರುವ ಸಂಪ್ರದಾಯ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಶಾಸಕರ ಅಭಿಪ್ರಾಯ ತೆಗೆದುಕೊಂಡು ಮುಖ್ಯಮಂತ್ರಿ ಮಾಡುವುದು ನಮ್ಮ ಸಂಪ್ರದಾಯ. ನಾಗಪುರದಿಂದ ಬಂದವರು ಮುಖ್ಯಮಂತ್ರಿ ಆಯ್ಕೆ ಮಾಡುವ ಸಂಸ್ಕೃತಿ ನಮ್ಮಲ್ಲಿಲ್ಲ’ ಎಂದು ಹರಿಪ್ರಸಾದ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
‘ದೇಶಕ್ಕೆ ಮಾದರಿ ಆಡಳಿತ ನೀಡುವ ವ್ಯಕ್ತಿ ಹಾಗೂ ಪಕ್ಷವನ್ನ ಉಳಿಸುವವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಅಭಿಪ್ರಾಯ. ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದರೆ ಹೇಳುತ್ತೇನೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.