ವೈದ್ಯನ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಬಿಜೆಪಿ ಸಂಸದನ ವಿರುದ್ಧ ಪ್ರಕರಣ ದಾಖಲು

ವೆರಾವಲ್: ಸಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ಪಟ್ಟಣದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸುಮಾರು ಮೂರು ತಿಂಗಳ ನಂತರ ಬಿಜೆಪಿ ಸಂಸದ ರಾಜೇಶ್ ಚೂಡಾಸಮ ಹಾಗೂ ಅವರ ತಂದೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು the print.in ವರದಿ ಮಾಡಿದೆ.
ಸೋಮವಾರ ಜುನಾಗಢ ಸಂಸದ ಚೂಡಾಸಮ ಹಾಗೂ ಅವರ ತಂದೆ ನರನ್‌ಭಾಯಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಹಾಗೂ 506-B (ಕ್ರಿಮಿನಲ್ ಬೆದರಿಕೆ) ಅಡಿ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲಾಗಿದೆ ಎಂದು ವೆರಾವಲ್ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಸ್.ಎಂ.ಇಸ್ರಾನಿ ಹೇಳಿದ್ದಾರೆ.
ಪ್ರಕರಣದ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಫೆಬ್ರವರಿ 12ರಂದು ವೈದ್ಯರಾದ ಡಾ. ಅತುಲ್ ಚಾಗ್ ಅವರು ತಮ್ಮ ವೆರಾವಲ್ ಪಟ್ಟಣದ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಅವರ ಪುತ್ರ ಹಿತಾರ್ಥ್ ಚಾಗ್ ಅವರ ದೂರನ್ನು ಆಧರಿಸಿ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲಾಗಿದೆ.





