ಉಡುಪಿ: ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಕ್ರಮ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ತಕ್ಷಣವೇ ಕ್ರಮ ಕೈಗೊಳ್ಳುವ ಕುರಿತಂತೆ ನೂತನ ಶಾಸಕ ಯಶ್‌ಪಾಲ್ ಸುವರ್ಣ ಅವರು ಇಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಪ್ರಸನ್ನ ಎಚ್. ಅವರೊಂದಿಗೆ ಚರ್ಚಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಪಂ ಗಳಿಗೆ ನಿರ್ದೇಶನ ನೀಡುವ ಕುರಿತಂತೆ ಅವರು ಸಿಇಒ ಅವರೊಂದಿಗೆ ಚರ್ಚಿಸಿದರು.
ಗ್ರಾಮೀಣ ಭಾಗದಲ್ಲಿ ಜನರಿಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಗ್ರಾಮಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗುವಂತೆ ನಿರ್ದೇಶನ ನೀಡುವಂತೆ ಸಲಹೆ ನೀಡಿದರು.
ಈ ಬಗ್ಗೆ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಕೂಡಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ಕುಡಿಯುವ ನೀರಿನ ಪೂರೈಕೆಗೆ ವ್ಯವಸ್ಥೆ ಮಾಡುವಂತೆಯೂ ಶಾಸಕರು ತಿಳಿಸಿದರು.







