ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ನಳಿನ್ ಕುಮಾರ್ ಕಟೀಲು ಖಂಡನೆ
ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ

ಮಂಗಳೂರು, ಮೇ 18: ಬಿಜೆಪಿ ರಾಜ್ಯಾಧ್ಯ್ಷಕ ನಳಿನ್ ಕುಮಾರ್ ಕಟೀಲು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷರೇ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್, "ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಒಂಭತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅವರ ಮೇಲೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಪ್ರಯೋಗಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮೈಮೇಲೆ ಬಾಸುಂಡೆ, ರಕ್ತ ಹೆಪ್ಪುಗಟ್ಟಿರುವುದಲ್ಲದೆ, ರಕ್ತ ಗಾಯ ಕೂಡಾ ಆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಧಿತರನ್ನು ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಕರೆದೊಯ್ದಿದ್ದಾರೆ.