ಮಡಿಕೇರಿ: ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

ಮಡಿಕೇರಿ ಮೇ 18 : ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಲಿಬೆಟ್ಟದ ಕಾರ್ಮಿಕ ಬಾಬಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿಷಯ ತಿಳಿದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮೃತ ಸಂಬಂಧಿಕರಿಗೆ ದೂರವಾಣಿ ಕರೆ ಮೂಲಕ ಸಾಂತ್ವನ ಹೇಳಿ ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.
ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳಿರ ಎಂ ದೇವಯ್ಯ ಮಾತನಾಡಿ, ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಬಾಬಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಸರ್ಕಾರದ ಪರಿಹಾರವನ್ನು ಕುಟುಂಬಕ್ಕೆ ನೀಡಲಾಗುವುದು. ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನ ಕಾಡಿಗಟ್ಟುವ ಕಾರ್ಯಚರಣೆ ಸದ್ಯದಲ್ಲೇ ಮುಂದುವರಿಸಲಾಗುವುದು ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆ ಸೆರೆಗೆ ಮೇಲಧಿಕಾರಿಗಳು ಸರ್ಕಾರದ ಅನುಮತಿ ಕೋರಿದ್ದು , ಸದ್ಯದಲ್ಲೇ ಸೆರೆಹಿಡಿದು ಸ್ಥಳಾಂತರಿಸಲಾಗುವುದು ಎಂದರು.
ಕಾರ್ಮಿಕ ಮಣಿ ಮಾತನಾಡಿ, ಕಾಡಾನೆ ಹಾವಳಿಯಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಾಲಾ ವಿದ್ಯಾರ್ಥಿಗಳು ಕಾರ್ಮಿಕರು ರಸ್ತೆಯಲ್ಲಿ ನಡೆದಾಡಲು ಸಾಧ್ಯವಾಗದಂತಾಗಿದೆ. ಹಲವು ವರ್ಷಗಳಿಂದಲೂ ನಿರಂತರ ಕಾಡಾನೆ ಹಾವಳಿ ಮಿತಿಮೀರಿದ್ದರು ಇದುವರೆಗೂ ಯಾವುದೇ ಶಾಶ್ವತ ಪರಿಹಾರ ಕಂಡುಕೊಳ್ಳಲಿಲ್ಲ ಅಮಾಯಕ ಜೀವಗಳು ಬಲಿಯಾಗುತ್ತಿದ್ದರು. ಸರ್ಕಾರ ಹಾಗೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳುತ್ತಿಲ್ಲ ಕೂಡಲೇ ಕಾಡಾನೆಗಳನ್ನು ಕಾಡಿಗಟ್ಟಿ ಕಾರ್ಮಿಕರು, ರೈತರ ಜೀವ ಉಳಿಸಬೇಕಾಗಿದೆ ಎಂದರು.
ಈ ಸಂದರ್ಭ ಪಾಲಿಬೆಟ್ಟ ಉಪ ಠಾಣಾಧಿಕಾರಿ ಪ್ರವೀಣ್ ಕುಮಾರ್, ಪ್ರಮುಖರಾದ ಅಜಿತ್, ಆನಂದ, ಸುಂದರ, ವಿಘ್ನೇಶ್, ಹರೀಶ್ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.







