ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ: ಎಚ್.ಡಿ. ಕುಮಾರಸ್ವಾಮಿ
‘ಮಳೆ ನೀರಿನಲ್ಲಿ ಸಿಲುಕಿ’ ಯುವತಿ ಸಾವು

ಬೆಂಗಳೂರು: ‘ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್‍ನಲ್ಲಿ ಮಳೆ ನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬವರು ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸವಾದ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಅಂಡರ್ ಪಾಸ್‍ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತಿ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?’ ಎಂದು ಪ್ರಶ್ನಿಸಿದ್ದಾರೆ.
‘ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್‍ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು’ ಎಂದು ಅವರು ಸಲಹೆ ನೀಡಿದ್ದಾರೆ.
‘ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲ ಅಂಡರ್ ಪಾಸ್‍ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
‘ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಸರಕಾರ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
‘ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾನುರೇಖಾ ಎಂಬ ಯುವತಿ ಕೆ.ಆರ್.ಸರ್ಕಲ್ ಅಂಡರ್ ಪಾಸ್‍ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವಿಗೀಡಾದ ಸುದ್ದಿ ತಿಳಿದು ಮನಸಿಗೆ ದುಖವಾಯಿತು. ಮೃತ ಯುವತಿಯ ಆತ್ಮಕ್ಕೆ ಶಾಂತಿ ದೊರಕಿಸಿಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಹೊಸ ಸರಕಾರ ತಕ್ಷಣವೆ ಕಾರ್ಯಪ್ರವೃತವಾಗಿ ಮಳೆಯಿಂದ ಉಂಟಾಗಬಹುದಾದ ಹಾನಿ ತಡೆಯಲು ಸಿದ್ದತೆ ಮಾಡಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಮಳೆಯಿಂದ ಅಮಾಯಕರು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಬೇಕು’
-ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ
ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ.1/5@BBMPCOMM
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2023







