ಮುಂಗಾರು ಪೂರ್ವ ಮಳೆಯಿಂದ ರಾಜ್ಯದಲ್ಲಿ 52 ಮಂದಿ ಮೃತ್ಯು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 23: ಮುಂಗಾರು ಪೂರ್ವ ಮಳೆಯಿಂದ 52 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ. 332 ಜಾನುವಾರು ಮೃತಪಟ್ಟಿದ್ದು, 814 ಮನೆಗಳಿಗೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೃತಪಟ್ಟ ಜಾನುವಾರುಗಳಿಗೂ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಮನೆ ಹಾನಿ ಬಗ್ಗೆಯೂ ಪರಿಶೀಲಿಸಿ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಖಾತೆಯಲ್ಲಿ 540 ಕೋಟಿ ರೂ.ಹಣವಿದೆ. ಅಗತ್ಯವಿದ್ದರೆ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ನೀಡಲು ತಿಳಿಸಲಾಗಿದೆ. ತೊಗರಿ ಬೆಳೆಗೆ ಬಂದಿದ್ದ ನೆಟ್ಟೆ ರೋಗಕ್ಕೆ ಪರಿಹಾರ ನೀಡಲಾಗುವುದು. ಮುಂಗಾರು ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ದಾಸ್ತಾನು ಮಾಡುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಸದ್ಯ 13.52 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಬಾರಿ ವಾಡಿಕೆಗಿಂತ ಶೇ.10ರಷ್ಟು ಮುಂಗಾರು ಪೂರ್ವ ಮಳೆಯಾಗಿದೆ. ನೆರೆ ಬಂದು ಹಾನಿಯಾಗಿರುವ ಕಡೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೆ, ಮುಂದಿನ ದಿನಗಳಲ್ಲಿ ಸಮಸ್ಯೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಅತಿಕ್ರಮಣ ತೆರುವು ಕಾರ್ಯಾಚರಣೆ ಮುಂದುವರಿಸಿ: ಬೆಂಗಳೂರಿನಲ್ಲಿ ಮಳೆ ಬಂದಾಗ ಆಗುವ ಅನಾಹುತಗಳನ್ನು ತಡೆಗಟ್ಟಲು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಮಳೆ ನೀರು ಸರಾಗವಾಗಿ ಹರಿಯಲು ಹೂಳು ಎತ್ತುವ ಕೆಲಸ ಮಾಡುವಂತೆಯೂ ತಿಳಿಸಲಾಗಿದೆ. ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಒತ್ತುವರಿಯನ್ನು ತೆರವು ಮಾಡುವ ಕೆಲಸ ಮಾಡಿದ್ದೆವು ಎಂದು ಅವರು ತಿಳಿಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಮಳೆ ಬಂದಾಗ ಬೆಂಗಳೂರಿನಲ್ಲಿರುವ ಅಂಡರ್ ಪಾಸ್‍ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಯಾವುದೆ ಕಾರಣಕ್ಕೂ ಮಳೆ ನೀರು ನಿಲ್ಲುವಂತಹ ಅಂಡರ್ ಪಾಸ್‍ಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡದಂತೆ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
‘ಪಠ್ಯಪುಸ್ತಕ ಪರಿಷ್ಕರಣೆ’ ಸಂಪುಟ ಸಭೆಯಲ್ಲಿ ತೀರ್ಮಾನ: ‘ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಪಠ್ಯಪುಸ್ತಕಗಳ ಪರಿಷ್ಕರಣೆಯ ವಿಚಾರದ ಕುರಿತು ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’
-ಸಿದ್ದರಾಮಯ್ಯ, ಮುಖ್ಯಮಂತ್ರಿ