ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು | ಹೊಸದಿಲ್ಲಿ ತಲುಪಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 24: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಸಂಜೆ ಹೊಸದಿಲ್ಲಿ ತಲುಪಿದ್ದಾರೆ.
ಗುರುವಾರ ಬೆಳಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜೊತೆ ಉಭಯ ನಾಯಕರು ಚರ್ಚೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆಗಳ ಹಂಚಿಕೆ ಕುರಿತು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆಗಳ ಹಂಚಿಕೆಗೆ ವರಿಷ್ಠರಿಂದ ಹಸಿರು ನಿಶಾನೆ ಸಿಕ್ಕಿದ್ದಲ್ಲಿ ರವಿವಾರದೊಳಗೆ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಮೊದಲ ಹಂತದಲ್ಲೆ 25 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ, ಅಂತಿಮವಾಗಿ ಎಂಟು ಮಂದಿಗೆ ಮಾತ್ರ ಸಂಪುಟ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು.
ಈ ಬಾರಿ 20 ಶಾಸಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು, ಅಸಮಾಧಾನವನ್ನು ತಣಿಸಲು ನಾಲ್ಕು ಸ್ಥಾನಗಳನ್ನು ಹಾಗೆ ಉಳಿಸಿಕೊಳ್ಳಲು ಉಭಯ ನಾಯಕರು ಉದ್ದೇಶಿಸಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಸಂಪುಟದಲ್ಲಿ ಸೇರ್ಪಡೆಯಾಗಲು ಈಗಾಗಲೆ ಹಲವು ಶಾಸಕರು ಹೊಸದಿಲ್ಲಿಯತ್ತ ಮುಖ ಮಾಡಿದ್ದು, ತಮ್ಮ ಸಂಪರ್ಕ ಬಳಸಿಕೊಂಡು ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ.
ಸಮುದಾಯ ಹಾಗೂ ಜಿಲ್ಲಾವಾರು ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದ್ದು, ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಕ್ರಿಯವಾಗಿ ಕೆಲಸ ಮಾಡುವವರು, ಪಕ್ಷಕ್ಕೆ ಶಕ್ತಿ ತುಂಬುವಂತಹ ಉತ್ಸಾಹಿಗಳನ್ನೆ ಸಂಪುಟಕ್ಕೆ ಸೇರಿಸಿಕೊಳ್ಳಲು ಒಲವು ತೋರಿಸಿದೆ ಎನ್ನಲಾಗಿದೆ.
‘ರಾಜ್ಯದ ಹಿತದೃಷ್ಟಿಯಿಂದ ವಿವಿಧ ವಿಷಯಗಳ ಬಗ್ಗೆ ಎಐಸಿಸಿ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತೇವೆ. ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ರಚಿಸಬೇಕಿದೆ. ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕಿದೆ’
-ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ







