ಬಿಲ್ಲವ ಸಮುದಾಯದ ವಿಧಾನ ಪರಿಷತ್ ಸದಸ್ಯಗೆ ಸಚಿವ ಸ್ಥಾನ ನೀಡಬೇಕು: ಪ್ರತಿಭಾ ಕುಳಾಯಿ

ಮಂಗಳೂರು, ಮೇ 27: ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್‌ನಲ್ಲಿ ಬಿಲ್ಲವ ಸಮುದಾಯದ ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದರೂ, ಇವರ ಪೈಕಿ ಒಬ್ಬರಿಗೂ ಕೂಡಾ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡದಕ್ಕೆ ಬಿಲ್ಲವ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದೆ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಮತ್ತು ಹರೀಶ್ ಕುಮಾರ್ ಅವರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಧುರೀಣ ಜನಾರ್ದನ ಪೂಜಾರಿ ಸಾಗಿದ ದಾರಿಯಲ್ಲಿ ಆನೇಕ ಮುಖಂಡರು ಇಂದು ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಿದ್ದರೂ, ಸರಕಾರ ರಚನೆಯ ಸಂದರ್ಭದಲ್ಲಿ ಬಿಲ್ಲವ ಸಮಾಜಕ್ಕೆ ಸೇರಿದ ಜನಪ್ರತಿನಿಧಿಗಳಿಗೆ ಅವಕಾಶ ಸಿಗುತ್ತಿಲ್ಲ ಎಂಬ ಬೇಸರ ಸಮಾಜದ್ದಾಗಿದೆ ಎಂದರು.
ಈಡಿಗ ಸಮುದಾಯದ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಿದಕ್ಕಾಗಿ ನಾವು ಸರಕಾರವನ್ನು ಅಭಿನಂದಿಸುತ್ತೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಸಮಾಜದ ಧುರೀಣರಾದ ಪದ್ಮನಾಭ ಕೋಟ್ಯಾನ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.