ಸರ್ಕಾರಿ ಬಸ್‌ಗಳಲ್ಲಿ ಶೇ. 50 ರಷ್ಟು ಸೀಟುಗಳು ಪುರುಷರಿಗೆ ಮೀಸಲು; ಮಹಿಳೆಯರಿಗೆ ಯಾವೆಲ್ಲ ಬಸ್‌ಗಳಲ್ಲಿ ಉಚಿತ ಪ್ರಯಾಣ?

ಬೆಂಗಳೂರು: ಜೂನ್ 2: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
''ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ (ಹವಾನಿಯಂತ್ರಿತ) ಹಾಗೂ ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ಇತರ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸರಕಾರಿ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ( ‘ಶಕ್ತಿ’) ಒದಗಿಸಲಾಗುವುದು'' ಎಂದು ತಿಳಿಸಿದರು.
''ಜೂನ್ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ'' ಎಂದರು.
''ರಾಜ್ಯದ ಒಳಗೆ ಸಂಚರಿಸುವ ಬಸ್‌ಗಳಲ್ಲಿ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಬಸ್‌ನಲ್ಲಿ ಪುರುಷರಿಗೆ ಶೇಕಡ 50ರಷ್ಟು ಆಸನಗಳನ್ನು ಮೀಸಲಿಡಲಾಗುವುದು'' ಎಂದು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.